ವಕ್ಫ್ ಮಂಡಳಿಯಿಂದ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

Update: 2020-01-13 16:59 GMT

ಮಂಗಳೂರು, ಜ.13: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸರಕಾರದ ಉತ್ತಮ ಯೋಜನೆ ಯಾಗಿದೆ. ಈ ಯೋಜನೆಯನ್ನು ಸಮಾಜದ ಎಲ್ಲಾ ಸಮುದಾಯದವರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ನೋಡಲ್ ಅಧಿಕಾರಿ ಡಾ. ರತ್ನಾಕರ್ ಹೇಳಿದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಕೇಂದ್ರದ ವತಿಯಿಂದ ಸೋಮವಾರ ವಕ್ಫ್ ಕಚೇರಿಯಲ್ಲಿ ಆರೋಗ್ಯ ಕಾರ್ಡ್ ವಿತರಣೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅರಿವು ಹಾಗೂ ನೋಂದಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಯೋಜನೆಯಡಿ ಪ್ರಾಥಮಿಕ, ಸಾಮಾನ್ಯ ದ್ವಿತೀಯ, ಸಂಕೀರ್ಣ ದ್ವಿತೀಯ, ತೃತೀಯ ಹಾಗೂ ತುರ್ತು ಹಂತದ ಚಿಕಿತ್ಸೆಗಳನ್ನು ಒದಗಿಸಲಾಗುತ್ತದೆ. ಬಿಪಿಎಲ್ ಕಾರ್ಡ್ ಹೊಂದಿದವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ.ಇರುತ್ತದೆ ಎಂದರು.

ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳಿಗೆ ಈ ಯೋಜನೆ ಲಭ್ಯವಿದೆ. ಜೊತೆಗೆ ಮಾರಾಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು, 36 ಉಪಚಿಕಿತ್ಸಾ ವಿಧಾನ ಗಳ ಸಹಿತ 1,650 ಚಿಕಿತ್ಸೆಗಳು ಲಭ್ಯವಿರುತ್ತದೆ. ಅದರಲ್ಲಿ 169 ತುರ್ತು ಚಿಕಿತ್ಸೆಗಳಿಗೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ರತ್ನಾಕರ್ ಹೇಳಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಬಿ-ಎಆರ್‌ಕೆ ಕಾರ್ಡನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ 10 ರೂ. ಶುಲ್ಕದೊಂದಿಗೆ ನೀಡಲಾಗುತ್ತದೆ. ಬಾಪೂಜಿ ಕೇಂದ್ರ, ಸೇವಾ ಸಿಂಧು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್‌ಗಳನ್ನು ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು ಎಂದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ.ಮೋನು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲಾ ಮಟ್ಟದ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ. ಬದ್ರುದ್ದೀನ್, ಆಯುಷ್ಮಾನ್ ಭಾರತ ಸಂಯೋಜನಾಧಿಕಾರಿ ಡಾ.ಸಚ್ಚಿದಾನಂದ, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ವಕ್ಫ್ ಅಧಿಕಾರಿ ಅಬೂಬಕರ್ ಮೋಂಟುಗೋಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News