ದಿನೇಶ್ ಅಮೀನ್ ಮಟ್ಟುಗೆ ಜೀವ ಬೆದರಿಕೆ: ದೂರು ದಾಖಲು

Update: 2020-01-14 14:19 GMT

ಬೆಂಗಳೂರು, ಜ.14: ಬಿಲ್ಲವ-ಮುಸ್ಲಿಮ್ ಸ್ನೇಹ ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ದುಷ್ಕರ್ಮಿಯೋರ್ವ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರಿಗೆ ಜೀವ ಬೆದರಿಕೆ ಒಡ್ಡಿದ್ದು, ಈ ಸಂಬಂಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಬಿಲ್ಲವ ಹಾಗೂ ಮುಸ್ಲಿಮ್ ಸಮುದಾಯದ ನಡುವೆ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಸ್ನೇಹ ಸಮಾವೇಶವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ವಿನಯಕುಮಾರ ಸೊರಕೆ ವಹಿಸಿದ್ದರೆ, ದಿನೇಶ್ ಅಮೀನ್ ಮಟ್ಟು ಮುಖ್ಯ ಭಾಷಣಗಾರರಾಗಿದ್ದರು. ಆದರೆ, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೋಡಿದ ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಎಂಬಾತ, ಜ.4ರ ರಾತ್ರಿ ಮೊಬೈಲ್ ಕರೆ ಮೂಲಕ ದಿನೇಶ್ ಅಮೀನ್ ಮಟ್ಟು ಅವರನ್ನು ಸಂಪರ್ಕಿಸಿ, ಅವಾಚ್ಯ ಪದಗಳಿಂದ ನಿಂದಿಸಿದಲ್ಲದೆ, ಪಿಸ್ತೂಲಿನಿಂದ ಗುಂಡು ಹೊಡೆದು ಹತ್ಯೆ ಮಾಡಲಾಗುವುದು ಎಂದು ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಅದೇ ರೀತಿ, ಮಾಜಿ ಸಚಿವ ವಿನಯಕುಮಾರ ಸೊರಕೆ ಅವರನ್ನು ಗುಂಡಿಕ್ಕಿ ಕೊಲೆ ಮಾಡುವುದಾಗಿ ದುಷ್ಕರ್ಮಿ ಬೆದರಿಕೆ ಹಾಕಿದ್ದಾನೆ. ಜೊತೆಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಸಿಕೊಂಡು ಅಶ್ಲೀಲ ಪದಗಳ ಮೂಲಕ ನಿಂದಿಸಿದ್ದಾನೆ ಎಂದು ಅಮೀನ್ ಮಟ್ಟು ಅವರು ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೊತೆಗೆ ಜೀವ ಬೆದರಿಕೆ ಒಡ್ಡಿರುವ ಆಡಿಯೊವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಮಾಡಿದ್ದಾನೆ ಎಂದು ಆರೋಪಿಸಿರುವ ಅಮೀನ್ ಮಟ್ಟು, ವಿಶ್ವನಾಥ್ ಪೂಜಾರಿ ಕಡ್ತಲ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 153(ಎ), 295 (ಎ) 504 ಹಾಗೂ 506 ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News