ಮಂಗಳೂರು ಗೋಲಿಬಾರ್ ಪ್ರಕರಣ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-01-14 14:16 GMT

ಬೆಂಗಳೂರು, ಜ.14: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ ಹಾಗೂ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಿವಾಸಿಗಳಾದ ಐ.ಕೆ. ಮುಹಮ್ಮದ್ ಇಕ್ಬಾಲ್ ಎಳಿಮಲೆ ಹಾಗೂ ಬಿ. ಉಮರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರ, ಸರಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷಗೆ ನೋಟಿಸ್ ಜಾರಿಗೊಳಿಸಿ, ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.

ವಕೀಲರ ವಾದ ಆಲಿಸಿದ ನ್ಯಾಯಪೀಠವು, ಘಟನೆಗೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು. ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಅಮಾನವೀಯವಾಗಿ ದೌರ್ಜನ್ಯ ಎಸಗಿದ್ದಾರೆ. ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ. ಲಾಠಿ ಚಾರ್ಜ್‌ನಲ್ಲಿ ಅನೇಕ ಅಮಾಯಕರಿಗೆ ಗಾಯಗಳಾಗಿವೆ. ಇಡೀ ಘಟನೆಯಲ್ಲಿ ಪೊಲೀಸರು ನಡೆದುಕೊಂಡ ರೀತಿ ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ. ಇದರ ಹಿಂದೆ ದೊಡ್ಡ ಪಿತೂರಿ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೀಗಾಗಿ, ಘಟನೆಯ ಬಗ್ಗೆ ಹೈಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳಿಂದ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕಿದೆ. ಸರಕಾರ ಈಗ ನಡೆಸುತ್ತಿರುವ ಮ್ಯಾಜಿಸ್ಟ್ರೇಟ್ ತನಿಖೆ ಕೇವಲ ಕಣ್ಣೊರೆಸುವ ತಂತ್ರವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯಲ್ಲಿ ಏನಿದೆ: ಘಟನೆಯನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ವಹಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು. ಮಂಗಳೂರು ಪೊಲೀಸ್ ಆಯುಕ್ತ ಸೇರಿದಂತೆ ಪೊಲೀಸ್ ಸಿಬ್ಬಂದಿ ವಿರುದ್ಧ ಐಪಿಸಿ ಸೆಕ್ಷನ್ 302, 307, 324, 326, 323, 120ಬಿ ಹಾಗೂ 34ರಡಿ ಎಫ್‌ಐಆರ್ ದಾಖಲಿಸಿ ತನಿಖೆಗೆ ಆದೇಶಿಸಬೇಕು. ಘಟನೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹಾಜರುಪಡಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News