ಅಶ್ಲೀಲ ಚಿತ್ರಗಳಿಗೆ ಮಕ್ಕಳ ಬಳಕೆ ಪ್ರಕರಣ: ಏಳು ಎಫ್‌ಐಆರ್ ದಾಖಲು- ಹೈಕೋರ್ಟ್‌ಗೆ ಹೇಳಿಕೆ

Update: 2020-01-15 18:35 GMT

ಬೆಂಗಳೂರು, ಜ.15: ರಾಜ್ಯದಲ್ಲಿ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಏಳು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರಕಾರ ತಿಳಿಸಿದೆ.

ರಾಜ್ಯದಲ್ಲಿ ಬಾಲನ್ಯಾಯ(ಮಕ್ಕಳ ಆರೈಕೆ ಹಾಗೂ ಸುರಕ್ಷತೆ) ಕಾಯ್ದೆಯ ಸಮರ್ಪಕ ಅನುಷ್ಠಾನ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಬಚ್ಚಾ ಬಚಾವೋ ಸ್ವಯಂ ಸೇವಾ ಸಂಸ್ಥೆ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣಪತ್ರ ಹಾಗೂ ಏಳು ಎಫ್‌ಐಆರ್ ಪ್ರತಿಗಳನ್ನು ಒದಗಿಸಿದರು.

ತಪ್ಪಿತಸ್ಥರ ವಿರುದ್ಧ ತನಿಖೆ ಅಗತ್ಯವಿದೆ ಎಂದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಸೂಚಿಸಿತು. ವಿಚಾರಣೆಯನ್ನು ಜು.21ಕ್ಕೆ ಮುಂದೂಡಿದೆ. ಕೇಂದ್ರ ಸರಕಾರದ ವರದಿಯಲ್ಲಿ 2018ರಲ್ಲಿ ಕರ್ನಾಟಕದಲ್ಲಿ 113 ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆದಿವೆ ಎಂದು ಗಂಭೀರ ಕಳವಳ ವ್ಯಕ್ತವಾಗಿದೆ. ಆದರೆ, ಈ ವಿಚಾರದಲ್ಲಿ ರಾಜ್ಯ ಸರಕಾರದ ಪ್ರತಿಕ್ರಿಯೆ ಆಘಾತಕಾರಿಯಾಗಿದೆ ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News