ಜ.18ರಂದು ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶ
Update: 2020-01-16 21:01 IST
ಬೆಂಗಳೂರು, ಜ.16: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಸಂಬಂಧಿಸಿದಂತೆ ಜನ ಜಾಗೃತಿ ಮೂಡಿಸಲು ಜ.18ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಜಾಗೃತಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ವೇದಿಕೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಸಾರ್ವಜನಿಕರಿಗಾಗಿ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ನೆಹರು ಮೈದಾನದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬೆಳಗಾವಿ, ಬಳ್ಳಾರಿ, ಮೈಸೂರು ಮತ್ತು ದಾವಣಗೆರೆ ವಲಯಗಳಿಂದ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ನಾಲ್ವರು ಪೊಲೀಸ್ ವರಿಷ್ಠಾಧಿಕಾರಿಗಳು, 10 ಡಿಸಿಪಿ, 42 ಇನ್ಸ್‌ಪೆಕ್ಟರ್, 65 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 120 ಎಎಸ್‌ಐ, 860 ಪೇದೆಗಳು ಭದ್ರತಗೆಗೆ ನಿಯೋಜನೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.