ದಿಲ್ಲಿ ವಿಧಾನಸಭಾ ಚುನಾವಣೆ: ಬಿಜೆಪಿಯ 57 ಅಭ್ಯರ್ಥಿಗಳ ಪಟ್ಟಿ ಪ್ರಕಟ

Update: 2020-01-17 16:43 GMT

ಹೊಸದಿಲ್ಲಿ,ಜ.17: ದಿಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯು ತನ್ನ 57 ಮಂದಿ ಅಭ್ಯರ್ಥಿಗಳ ಹೆಸರುಗಳನ್ನು ಶುಕ್ರವಾರ ಪ್ರಕಟಿಸಿದೆ. ದಿಲ್ಲಿ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 11ರಂದು ಮತಎಣಿಕೆ ನಡೆಯಲಿದೆ.

ಬಿಜೆಪಿ ಪ್ರಕಟಿಸಿದ 57 ಅಭ್ಯರ್ಥಿಗಳ ಪಟ್ಟಿಯಲ್ಲಿ 11 ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು ನಾಲ್ವರು ಅಭ್ಯರ್ಥಿಗಳು ಮಹಿಳೆಯರು ಎಂದು ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ತಿಳಿಸಿದ್ದಾರೆ. ಎಎಪಿ ಪಕ್ಷವು ಈಗಾಗಲೇ ದಿಲ್ಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಆದಾಗ್ಯೂ ಬಿಜೆಪಿಯು ಎಎಪಿ ನಾಯಕ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ತಾನು ಕಣಕ್ಕಿಳಿಸಲಿರುವ ಅಭ್ಯರ್ಥಿಯ ಹೆಸರನ್ನು ಈವರೆಗೆ ಪ್ರಕಟಿಸಿಲ್ಲ. ಹೊಸದಿಲ್ಲಿ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಶೀಘ್ರವೇ ಪ್ರಕಟಿಸಲಾಗುವುದೆಂದು ತಿವಾರಿ ತಿಳಿಸಿದ್ದಾರೆ.

 ಹೊಸದಿಲ್ಲಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮನೋಜ್‌ ಕುಮಾರ್ ದಿಲ್ಲಿ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಸಿರುವ ತನ್ನ ಪಕ್ಷದ 57 ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದರು. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News