ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ: ಸಚಿವ ಸಂಪುಟ ಸಭೆ ತೀರ್ಮಾನ

Update: 2020-01-17 16:46 GMT

ಬೆಂಗಳೂರು, ಜ.17: ಆಶಾ ಕಾರ್ಯಕರ್ತೆಯರಿಗೆ ಒಂದು ಬಾರಿ ಸೆಟಲ್‌ಮೆಂಟ್ ಅಡಿಯಲ್ಲಿ 3000 ರೂ.ಗಳಂತೆ 41,628 ಆಶಾ ಕಾರ್ಯಕರ್ತೆಯರಿಗೆ 12.48 ಕೋಟಿ ರೂ.ವೆಚ್ಚದಲ್ಲಿ ಪ್ರೋತ್ಸಾಹ ಧನ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಲೋಕಾಯುಕ್ತರ ಅಧೀನದಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಸಂಗ್ರಹಿಸಿಡಲು ವಿಶೇಷ ಗೋದಾಮು ನಿರ್ಮಿಸಿ, ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಭದ್ರತೆ ಒದಗಿಸಲಾಗುವುದು. ಇದಕ್ಕಾಗಿ 120 ಕೋಟಿ ರೂ.ಗಳನ್ನು ವೆಚ್ಚ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಅವರು ತಿಳಿಸಿದರು.

ಮಾಜಿ ಸ್ಪೀಕರ್ ಹಾಗೂ ಬಿಜೆಪಿ ಹಿರಿಯ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಐವರು ಸದಸ್ಯರನ್ನು ಒಳಗೊಂಡ ಸರಕಾರಿ ಜಮೀನು ಸಂರಕ್ಷಣಾ ಸಮಿತಿ ರಚನೆ ಮಾಡಲಾಗಿದ್ದು, ಶಾಸಕರಾದ ಅರಗ ಜ್ಞಾನೇಂದ್ರ, ಎಸ್.ಆರ್.ವಿಶ್ವನಾಥ್, ಎ.ಟಿ.ರಾಮಸ್ವಾಮಿ, ರಾಜಶೇಖರ ಪಾಟೀಲ್ ಹಾಗೂ ರಾಜೂಗೌಡರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

ಪೀಣ್ಯಾ ಕೈಗಾರಿಕಾ ವಸಾಹತು, ಹುಬ್ಬಳ್ಳಿ ಕೈಗಾರಿಕಾ ವಸಾಹತುಗಳ ಸಮಗ್ರ ಅಭಿವೃದ್ಧಿಗೆ ಸರಕಾರ ಮುಂದಾಗಿದ್ದು, ಮೂಲ ಸೌಕರ್ಯಗಳಿಗಾಗಿ ಪೀಣ್ಯ ಕೈಗಾರಿಕಾ ವಸಾಹತು ಪ್ರದೇಶಕ್ಕೆ 50 ಕೋಟಿ ರೂ, ಹುಬ್ಬಳ್ಳಿ ಕೈಗಾರಿಕಾ ವಸಾಹತು ಪ್ರದೇಶಕ್ಕೆ 18.50 ಕೋಟಿ ರೂ. ಅನುದಾನ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಮಾಧುಸ್ವಾಮಿ ಹೇಳಿದರು.

ಬೆಂಗಳೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಕಾರಾಗೃಹಗಳಲ್ಲಿ ಭಯೋತ್ಪಾದನೆ, ನಕ್ಸಲ್ ಚಟುವಟಿಕೆ ಸೇರಿದಂತೆ ಇನ್ನಿತರ ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರು ಸಾಮಾನ್ಯ ಖೈದಿಗಳೊಂದಿಗೆ ಇದ್ದಾರೆ. ಇವರಿಗೆ ಹೆಚ್ಚಿನ ಭದ್ರತೆಯಲ್ಲಿಡುವುದು ಅಗತ್ಯವಿರುವುದರಿಂದ ಅಂದಾಜು 100 ಕೋಟಿ ರೂ.ವೆಚ್ಚದಲ್ಲಿ ಗರಿಷ್ಠ ಭದ್ರತಾ ಕಾರಾಗೃಹಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮಾವಳಿ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳಿಗೆ ದ್ವಿಗುಣ ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ. ಅಕ್ರಮವಾಗಿರುವ ನಿರ್ಮಾಣವನ್ನು ತೆರವುಗೊಳಿಸುವವರೆಗೆ ದಂಡದ ಸ್ವರೂಪವಾಗಿ ದ್ವಿಗುಣ ತೆರಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ನಾಳೆಯೇ ಈ ಸಂಬಂಧ ಸರಕಾರಿ ಆದೇಶ ಹೊರಬೀಳಲಿದೆ. ಈಗಾಗಲೇ ಈ ನಿಯಮ ಬಿಬಿಎಂಪಿ ಹೊರತುಪಡಿಸಿ ಬೇರೆ ಎಲ್ಲ ಪಾಲಿಕೆಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಯಾದಗಿರಿ ಹಾಗೂ ಹಾವೇರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದರಲ್ಲಿ ಕೇಂದ್ರ ಸರಕಾರದ ಪಾಲು ಶೇ.60 ಹಾಗೂ ರಾಜ್ಯ ಸರಕಾರದ ಪಾಲು ಶೇ.40ರಷ್ಟು ಇರಲಿದೆ. ಮೈಸೂರಿನ ಬಿಕೆಟಿಬಿ ಆಸ್ಪತ್ರೆ ಆವರಣದಲ್ಲಿ 42 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಪಾಂಡವಪುರ ಹಾಗೂ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಗಳನ್ನು 40 ವರ್ಷಕ್ಕೆ ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶೀಘ್ರವೇ ಟೆಂಡರ್ ಕರೆಯಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಅಲ್ಲದೇ, ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ 32 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News