ದಾವೋಸ್ ಪ್ರವಾಸದಿಂದ ವಾಪಸ್ ಆದ ಬಳಿಕ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

Update: 2020-01-19 15:04 GMT

ಬೆಂಗಳೂರು, ಜ. 19: ದಾವೋಸ್ ಪ್ರವಾಸದಿಂದ ಹಿಂದಿರುಗಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ನಗರದಲ್ಲಿ ವಿದೇಶಿ ಪ್ರವಾಸಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಅರ್ಧಗಂಟೆ ಮಾತುಕತೆ ನಡೆಸಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದಾವೋಸ್‌ನಲ್ಲಿ ಜ.20ರಿಂದ ಜರುಗಲಿರುವ ವಿಶ್ವ ಆರ್ಥಿಕ ಶೃಂಗಸಭೆಯಿಂದ ವಾಪಸ್ ಬಂದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಗ್ಗೆ ಗಮನ ಹರಿಸುತ್ತೇನೆ ಎಂದ ಅವರು, ವಿದೇಶಿ ಪ್ರವಾಸದಿಂದ ಆಗಮಿಸಿದ ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಶೃಂಗಸಭೆಯಲ್ಲಿ 38 ಕೈಗಾರಿಕೋದ್ಯಮಗಳು ಮತ್ತು ಬಂಡವಾಳ ಹೂಡಿಕೆದಾರರ ಜೊತೆ ಸಂವಾದ ನಿಗದಿಯಾಗಿದೆ. ಇದರಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಾವಕಾಶವು ದೊರೆಯಲಿದೆ ಎಂದರು.

ಕೈಗಾರಿಕೋದ್ಯಮಿಗಳಿಗೆ ಮತ್ತು ಹೂಡಿಕೆದಾರರಿಗೆ ನಮ್ಮ ಇತಿ-ಮಿತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡುವ ಪ್ರಯತ್ನ ಮಾಡುವ ಭರವಸೆ ನೀಡುವುದರ ಜೊತೆಗೆ ಅವರಿಗೆ ಇರುವ ಸಂದೇಹಗಳನ್ನು ದೂರ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ವಿವರಿಸಿದರು.

ಜಗತ್ತಿನಲ್ಲಿ ಆರ್ಥಿಕ ಹಿಂಜರಿತವಿದ್ದರೂ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿಯೇ ಇದೆ. ಹಿಂದಿನ ಜಾಗತಿಕ ಹೂಡಿಕೆದಾರರ ಸಮಾವೇಶ ಬಹಳ ಯಶಸ್ವಿಯಾಗಿತ್ತು. ಇಲ್ಲಿ ಹೆಚ್ಚು ಹೆಚ್ಚು ಹೂಡಿಕೆದಾರರು ಬರಬೇಕು. ಅದರಿಂದ ಇಲ್ಲಿನ ಬಹಳಷ್ಟು ಮಂದಿಗೆ ಉದ್ಯೋಗ ಸಿಗಬೇಕೆಂದು ಅಪೇಕ್ಷಿಸುತ್ತೇನೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ. ದಾವೋಸ್‌ಗೆ ನನ್ನೊಂದಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಆಗಮಿಸಲಿದ್ದಾರೆ ಎಂದರು.

ಚರ್ಚೆ: ಸ್ವಿಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ದಾವೋಸ್‌ಗೆ ಪ್ರಯಾಣ ಬೆಳೆಸಿದೆ. ಈ ಸಮಾವೇಶವು ಜ.20ರಿಂದ 25ರ ವರೆಗೆ ನಡೆಯಲಿದ್ದು, 40ಕ್ಕೂ ಹೆಚ್ಚು ಜಾಗತಿಕ ಮಟ್ಟದ ಕಂಪೆನಿಗಳ ಜತೆ ಮುಖ್ಯಮಂತ್ರಿ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ’ ಎಂದು ತಿಳಿಸಲಾಗಿದೆ.

‘ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಒಳಗೊಂಡ ನಿಯೋಗದೊಂದಿಗೆ ತೆರಳಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ, ಸಚಿವ ಪ್ರಭು ಚೌವ್ಹಾಣ್, ಶಾಸಕ ಎಸ್.ಆರ್.ವಿಶ್ವನಾಥ್ ಶುಭ ಕೋರಿ ಬೀಳ್ಕೊಟ್ಟರು’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News