ಪೋಲಿಯೊ ಮುಕ್ತ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಸಚಿವ ಆರ್.ಅಶೋಕ್

Update: 2020-01-19 17:47 GMT

ಬೆಂಗಳೂರು, ಜ.19: ಆರೋಗ್ಯವಂತ ಸಮಾಜದಿಂದ ಮಾತ್ರ ದೇಶದ ಉನ್ನತಿ ಸಾಧ್ಯವಾಗುವುದರಿಂದ, ಪೋಲಿಯೊ ಮರುಕಳಿಸದಂತೆ ತಡೆಯಲು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರೆಲ್ಲರೂ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಕರೆ ನೀಡಿದರು.

ರವಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಒಟ್ಟಾರೆ 469 ಬೂತ್‌ಗಳನ್ನು ತೆರೆಯಲಾಗಿದೆ. ಭಾರತ ದೇಶವು ಪೋಲಿಯೊ ಮುಕ್ತ ರಾಷ್ಟ್ರವಾಗಿದೆಯಾದರೂ, ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮುನ್ನೆಚ್ಚರಿಕಾ ಕ್ರಮವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಐದು ವರ್ಷದೊಳಗಿನ ಯಾವೊಂದು ಮಗುವು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಲು ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಮಾಜ ಸುಧಾರಕರು, ಶಿಕ್ಷಕರು ಪಲ್ಸ್ ಪೋಲಿಯೊ ಲಸಿಕೆ ಕುರಿತು ಜನಸಾಮಾನ್ಯರಿಗೆ ಮಾಹಿತಿ ನೀಡಬೇಕೆಂದು ಎಂದು ಅವರು ಮನವಿ ಮಾಡಿದರು.

ಕೊಳಗೇರಿ ವಾಸಿಗಳು, ಕೆಳವರ್ಗದವರು ಆರೋಗ್ಯದ ಕುರಿತು ನಿರ್ಲಕ್ಷ ವಹಿಸದಂತೆ, ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಅಶೋಕ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್, ಜಿ.ಪಂ.ಸಿಇಓ ಎನ್.ಎಂ.ನಾಗರಾಜು, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News