ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಲು ಆರ್‌ಟಿಒ ಕರೆ

Update: 2020-01-20 16:51 GMT

ಮಂಗಳೂರು, ಜ.20: ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜೀವವನ್ನು ಉಳಿಸುವುದು ಮೊದಲ ಕರ್ತವ್ಯವಾಗಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ ಹೇಳಿದರು.

ಪ್ರಾದೇಶಿಕ ಸಾರಿಗೆ ಕಚೇರಿಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲರೂ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು, ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಸಬಾರದು ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರ ಜೊತೆಗೆ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಇಟ್ಟಿರ ಬೇಕು ಎಂದು ಅವರು ಸಲಹೆ ನೀಡಿದರು.

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ್ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಅಪಘಾತ ಗಳ ಸಂಖ್ಯೆಯು ಗಣನೀಯವಾಗಿ ಕಡಿಮೆವಾಗುತ್ತಿದೆ ಅದರಂತೆ ದ.ಕ. ಜಿಲ್ಲೆಯಲ್ಲಿ ಮುಂದಿನ ದಿನದಲ್ಲಿ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಾಹನ ತರಬೇತುದಾರರು, ಸಾರಿಗೆ ವಾಹನ ಮಾಲಕರು, ಮಾರಾಟಗಾರರು ಮತ್ತು ಸಿಬ್ಬಂದಿ ವರ್ಗವು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News