'ಹೈಕಮಾಂಡ್‌ಗೆ ಪತ್ರ'ದ ಬಗ್ಗೆ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

Update: 2020-01-20 18:06 GMT

ಬೆಂಗಳೂರು, ಜ.20: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಇರುವುದು ಸತ್ಯ. ಆದರೆ, ನಾನು ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್‌ಗೆ ಯಾವುದೇ ಪತ್ರವನ್ನು ಬರೆದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಸಿದ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ಗೆ ಮಾಹಿತಿ ನೀಡಿದ್ದೇನೆ ಎಂದರು.

ಉಪ ಚುನಾವಣೆಯ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದಿನೇಶ್ ಗುಂಡೂರಾವ್ ಕಳೆದ ಎರಡು ತಿಂಗಳಿನಿಂದ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೆ ತಟಸ್ಥವಾಗಿದ್ದಾರೆ. ಆದುದರಿಂದ, ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಹೆಚ್ಚು ವಿಳಂಬ ಮಾಡದಂತೆ ಅವರಿಗೆ ಮನವಿ ಮಾಡಿದ್ದೇನೆ ಎಂದು ಪರಮೇಶ್ವರ್ ಹೇಳಿದರು.

ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಹೆಸರುಗಳು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲವಾಗಿ ಕೇಳಿ ಬರುತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಆದಷ್ಟು ಶೀಘ್ರದಲ್ಲಿ ಅಧ್ಯಕ್ಷರ ನೇಮಕ ಮಾಡುವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯ ರಾಜಕೀಯದಲ್ಲಿ ಮಧ್ಯಂತರ ವಿಧಾನಸಭೆಯ ಮಾತುಗಳು ಆಗಿಂದಾಗ್ಗೆ ಕೇಳಿ ಬರುತ್ತಿವೆ. ಅಲ್ಲದೇ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪದಲ್ಲಿವೆ. ಅಧ್ಯಕ್ಷರನ್ನು ನೇಮಕ ಮಾಡುವುದರಿಂದ, ಪಕ್ಷದ ಚಟುವಟಿಕೆಗಳನ್ನು ಸಕ್ರಿಯವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಪ್ರತ್ಯೇಕಿಸಿದರೆ ತಪ್ಪೇನಿಲ್ಲ. ಈಗಾಗಲೇ ಮಹಾರಾಷ್ಟ್ರದಲ್ಲಿ ಈ ಮಾದರಿಯನ್ನು ಅನುಸರಿಸಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಮಾಡಿದರೆ ತಪ್ಪೇನಿಲ್ಲ. ಒಂದು ವೇಳೆ ಹೈಕಮಾಂಡ್ ಈ ಎರಡು ಸ್ಥಾನಗಳನ್ನು ಪ್ರತ್ಯೇಕಿಸಿದರೆ ಉಭಯ ನಾಯಕರು ಪರಸ್ಪರ ಹೊಂದಾಣಿಕೆಯಿಂದ ಮುಂದುವರೆಯಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಪ್ರತ್ಯೇಕಿಸಿದರೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಕೇಳಿ ಬರುತ್ತಿರುವ ಮಾತುಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿರಬಹುದು. ಅದಕ್ಕೆ ಅವರದ್ದೇ ಆದ ಕಾರಣಗಳು ಇರಬಹುದು ಎಂದರು.

ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿದೇಶ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿದೇಶದಿಂದ ಬಂಡವಾಳ ತರುವುದಾಗಿ ಹೇಳಿ ಮುಖ್ಯಮಂತ್ರಿ ಹೋಗಿದ್ದಾರೆ. ನಮ್ಮ ರಾಜ್ಯದ ಪರಿಸ್ಥಿತಿಯನ್ನು ಹೂಡಿಕೆದಾರರಿಗೆ ಸರಿಯಾಗಿ ಮನದಟ್ಟು ಮಾಡಿಕೊಟ್ಟು ಬಂಡವಾಳವನ್ನು ತರಲಿ ಎಂದು ಆಶಿಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News