9 ಜಿಲ್ಲೆಗಳ 141 ಗ್ರಾಮ ಪಂಚಾಯತ್ ಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Update: 2020-01-22 12:54 GMT

ಬೆಂಗಳೂರು, ಜ.22: ರಾಜ್ಯದ ಒಂಬತ್ತು ಜಿಲ್ಲೆಗಳ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದ್ದು, ಈ ಸಂಬಂಧ ಇಂದು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದೆ.

ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜ.25 ರಿಂದ ಫೆ.11ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಜ.25ರಂದು ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಜ.28 ಕೊನೆಯ ದಿನವಾಗಿದೆ. ಜ.29ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜ.31ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಫೆ.9ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮರು ಮತದಾನ ಅವಶ್ಯವಿದ್ದಲ್ಲಿ ಫೆ.10ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಬಹುದಾಗಿದೆ. ಫೆ.11ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದ್ದು, ಅಂದೇ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳ 141 ಗ್ರಾಮ ಪಂಚಾಯತ್ಗಳ ಒಟ್ಟು 173 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರಾಜ್ಯ ಚುನಾವಣಾ ಆಯೋಗದ ವೆಬ್‌ಸೈಟ್ www.karsec.gov.in ಗೆ ಭೇಟಿ ನೀಡಬಹುದಾಗಿದೆ ಎಂದು ಆಯೋಗದ ಅಧೀನ ಕಾರ್ಯದರ್ಶಿಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News