ವಿವಾದಿತ ಹೇಳಿಕೆ: ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

Update: 2020-01-22 17:08 GMT

ಬೆಂಗಳೂರು, ಜ.22: ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ರೇಣುಕಾಚಾರ್ಯ ವೇಷ ಧರಿಸಿದ ವ್ಯಕ್ತಿ ಕೈಗೆ ಡಮ್ಮಿ ಪಿಸ್ತೂಲು ನೀಡಿ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು, ಶಾಸಕ ರೇಣುಕಾಚಾರ್ಯ ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸ್ಥಾಪಿಸಲು ಹೊರಟಿದ್ದಾರೆ ಎಂದು ಟೀಕಿಸಿದರು.

ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲಾಗಿದೆ, ಮುಸ್ಲಿಮರು ದೇಶದ್ರೋಹಿಗಳು ಎಂಬ ಹೇಳಿಕೆ ನೀಡಿ ಶಾಂತಿ ಕದಡುವ ಪ್ರಯತ್ನಕ್ಕೆ ರೇಣುಕಾಚಾರ್ಯ ಕೈ ಹಾಕಿದ್ದಾರೆ ಎಂದು ಪ್ರತಿಭಟನೆ ನಿರತ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಆರೋಪಿಸಿದರು. ಸಿಎಎ ಮತ್ತು ಎನ್‌ಆರ್‌ಸಿ ವಿಷಯವನ್ನು ಪ್ರಸ್ತಾಪಿಸಿ ಬಿಜೆಪಿ ನಾಯಕರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ಸಂಬಂಧಪಟ್ಟವರ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಜನಾರ್ಧನ್, ರೇಣು, ಇ.ಶೇಖರ್, ಎ.ಆನಂದ್, ಉಮೇಶ್, ಪುಟ್ಟರಾಜು, ಎಂ.ಎ.ಸಲೀಂ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News