ಸೋತವರಿಗೆ ಸಚಿವ ಸ್ಥಾನ ನೀಡುವ ಮಾತೇ ಇಲ್ಲ ಎಂದ ಸಿಎಂ ಯಡಿಯೂರಪ್ಪ

Update: 2020-01-24 12:58 GMT

ಬೆಂಗಳೂರು, ಜ. 24: ‘ಇನ್ನೂ ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಉತ್ಸಾಹ ಮನೆ ಮಾಡಿದೆ.

ಶುಕ್ರವಾರ ವಿದೇಶಿ ಪ್ರವಾಸದಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗುವುದು. ಆ ಬಳಿಕ ಮೂರೇ ದಿನಗಳಲ್ಲಿ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

ಸೋತವರಿಗೆ ಸ್ಥಾನ ಇಲ್ಲ: ರಾಜ್ಯಕ್ಕೆ ನಾಳೆ(ಜ.25)ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಚರ್ಚಿಸಿದ ಬಳಿಕವೇ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಪಟ್ಟಿ ಸಿದ್ದಪಡಿಸಲಾಗುವುದು. ಉಪಚುನಾವಣೆಯಲ್ಲಿ ಗೆದ್ದವರಿಗೆ ಅಷ್ಟೇ ಸಚಿವ ಸ್ಥಾನ ನೀಡಲಾಗುವುದು. ಆದರೆ, ಸೋತವರಿಗೆ ಸಚಿವ ಸ್ಥಾನ ನೀಡುವ ಮಾತೇ ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ವಿಳಂಬಕ್ಕೆ ಬೇಸರ: ಸಂಪುಟ ವಿಸ್ತರಣೆ ವಿಳಂಬಕ್ಕೆ ಕಾಂಗ್ರೆಸ್-ಜೆಡಿಎಸ್‌ನಿಂದ ವಲಸೆ ಬಂದು ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಶುಕ್ರವಾರ ಶಾಸಕ ಭವನದಲ್ಲಿ ಮಾತನಾಡಿದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಮಂದಿಗೂ ಅಧಿಕಾರ ನೀಡುವ ಭರವಸೆಯನ್ನು ಬಿಎಸ್‌ವೈ ನೀಡಿದ್ದರು. ಆದರೆ, ಸಂಪುಟ ವಿಸ್ತರಣೆ ವಿಳಂಬ ಸರಿಯಲ್ಲ ಎಂದು ಆಕ್ಷೇಪಿಸಿದರು. ವಿದೇಶಿ ಪ್ರವಾಸದಿಂದ ಹಿಂದಿರುಗಿರುವ ಸಿಎಂ ಬಿಎಸ್‌ವೈ ಒಂದೆರಡು ದಿನಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ಎಲ್ಲರಿಗೂ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ರಾಜೀನಾಮೆ ಪಡೆಯಲಿ: ರಿಝ್ವನ್ ಅರ್ಶದ್ ಅವರಿಗೆ ತೆರವಾಗಿರುವ ಪರಿಷತ್ ಸ್ಥಾನವನ್ನು ನನಗೆ ನೀಡಬೇಕು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ರಾಜೀನಾಮೆ ಪಡೆದುಕೊಳ್ಳಲಿ ಎಂದು ಮಾಜಿ ಸಚಿವ ಆರ್.ಶಂಕರ್ ಇದೇ ವೇಳೆ ಹೇಳಿದರು.

ನನಗೆ ನೀಡಿರುವ ಭರವಸೆಯಂತೆಯೇ ಅವರಿಂದ ರಾಜೀನಾಮೆ ಪಡೆದು ಮೇಲ್ಮನೆ ಸದಸ್ಯನನ್ನಾಗಿ ಮಾಡಿ ಸಚಿವ ಸ್ಥಾನವನ್ನು ನೀಡಬೇಕು. ಈ ಸಂಬಂಧ ಮುಖ್ಯಮಂತ್ರಿ ಸಮ್ಮತಿಸಿದ್ದಾರೆ. ನನಗೆ ಈ ವಿಚಾರದಲ್ಲಿ ಬಿಎಸ್‌ವೈ ಅವರ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.

ಸಿಎಂ ಹೊಸದಿಲ್ಲಿಗೆ: ಉಪಚುನಾವಣೆಯಲ್ಲಿ ಸೋತ ಎಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಖುದ್ದು ಸಿಎಂ ಬಿಎಸ್‌ವೈ ಪರೋಕ್ಷವಾಗಿ ಹೇಳಿಕೆ ನೀಡಿದ್ದು, ‘ಅರ್ಹ’ರ ಮುಂದಿನ ನಡೆ ಏನು ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

ಈ ಮಧ್ಯೆ ಸೋಮವಾರ (ಜ.27) ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿಗೆ ತೆರಳುವ ಸಾಧ್ಯತೆಗಳಿದ್ದು, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ವರಿಷ್ಠರು ಒಪ್ಪಿಗೆ ನೀಡಿದರೆ ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆಯಾಗುವುದು ಬಹುತೇಕ ನಿಶ್ಚಿತ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News