ಬಿಜೆಪಿ, ಸಂಘಪರಿವಾರದ 'ಹಿಂದೂ ರಾಷ್ಟ್ರದ' ಉದ್ದೇಶ ಈಡೇರುವುದಿಲ್ಲ: ದೇವೇಗೌಡ

Update: 2020-01-26 13:04 GMT

ಬೆಂಗಳೂರು, ಜ.26 : ಕೇಂದ್ರ ಸರಕಾರ ಜಾರಿಗೆ ಮುಂದಾಗಿರುವ ಪೌರತ್ವ(ತಿದ್ದುಪಡಿ) ಕಾಯ್ದೆಯ ಕುರಿತು ತನ್ನ ನಿರ್ಧಾರವನ್ನು ಸರಕಾರ ಪುನರ್ ಪರಿಶೀಲಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

 ರವಿವಾರ ನಗರದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ 71 ನೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ ವಿರೋಧಿ ಕಾಯ್ದೆಯ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.

ದೇಶದ ಎಲ್ಲ ಕಡೆಗಳಿಂದಲೂ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆ, ಚಳವಳಿಗಳು ನಡೆಯುತ್ತಿವೆ. ಇದನ್ನು ಜಾರಿ ಮಾಡಬೇಡಿ ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ, ನಾವು ಗಾಂಧಿ ಮಾರ್ಗದಲ್ಲಿ ಶಾಂತಿಯುತ ಹೋರಾಟ ಮಾಡುತ್ತೇವೆ ಎಂದು ನುಡಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರಕಾರ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯನ್ನುಂಟು ಮಾಡುವಂತಹ ನೀತಿಗಳನ್ನು ಜಾರಿ ಮಾಡಲು ಮುಂದಾಗುತ್ತಿದೆ. ಬಿಜೆಪಿ ಹಾಗೂ ಅವರ ಸಂಘಪರಿವಾರದ ಮೂಲ ಆಶಯವಾದ ಹಿಂದೂ ರಾಷ್ಟ್ರ ಮಾಡುವ ಉದ್ದೇಶ ಈಡೇರುವುದಿಲ್ಲ ಎಂದು ದೇವೇಗೌಡ ಹೇಳಿದರು.

ಈ ಹಿಂದೆ ಬಿಜೆಪಿಯ ಹಲವರು ಹಿಂದೂ ರಾಷ್ಟ್ರ ಮಾಡಲು ಪ್ರಯತ್ನಿಸಿದರು. ಅದು ಫಲ ನೀಡಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಜೆಂಡಾ ಹಿಂದೂ ರಾಷ್ಟ್ರ ಮಾಡುವುದಾಗಿದೆ ಎಂದು ಹೇಳಿದ್ದಾರೆ. ಆದರೆ, ಅವರ ಆಶಯ ಈಡೇರಲ್ಲ. ಇದು ಜಾತ್ಯತೀತ ರಾಷ್ಟ್ರವಾಗಿದ್ದು, ಎಲ್ಲರದ್ದೂ ಆಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ವಿರುದ್ಧ ಕೊಲೆ ಸಂಚು ನಡೆದಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News