ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲಿರುವ ತೆಲಂಗಾಣ

Update: 2020-01-26 16:02 GMT

ಹೈದರಾಬಾದ್, ಜ.26: ಪೌರತ್ವ ಕಾಯ್ದೆ ವಿರೋಧಿಸಿ ಶೀಘ್ರದಲ್ಲೇ ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗುವುದು ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ. ಪಂಜಾಬ್, ಕೇರಳ ಮತ್ತು ರಾಜಸ್ತಾನ ವಿಧಾನಸಭೆಯಲ್ಲಿ ಈಗಾಗಲೇ ಇಂತಹ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.

ಟಿಆರ್‌ಎಸ್ ಜಾತ್ಯಾತೀತ ಪಕ್ಷವಾಗಿದ್ದು, ಪೌರತ್ವ ಕಾಯ್ದೆಗೆ ನಮ್ಮ ವಿರೋಧವಿದೆ. ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ಶೀಘ್ರ ನಿರ್ಣಯ ಅಂಗೀಕರಿಸಲಾಗುವುದು. ಅಲ್ಲದೆ ಇತರ 15 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದು ಫೆಬ್ರವರಿಯಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಹೈದರಾಬಾದ್‌ನಲ್ಲಿ ಮುಖ್ಯಮಂತ್ರಿಗಳ ಸಭೆ ಆಯೋಜಿಸಲಾಗುವುದು ಎಂದು ಚಂದ್ರಶೇಖರ ರಾವ್ ಹೇಳಿದ್ದಾರೆ.

ಪೌರತ್ವ ಕಾಯ್ದೆಯನ್ನು ರದ್ದುಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯನ್ನು ಒತ್ತಾಯಿಸಿದ ಅವರು, ಸುಪ್ರೀಂಕೋರ್ಟ್ ಸ್ವಯಂಪ್ರೇರಣೆಯಿಂದ ಕಾಯ್ದೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು. ತೆಲಂಗಾಣದ ಆಡಳಿತಾರೂಢ ಪಕ್ಷ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‌ಎಸ್) ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಯಲ್ಲಿ ಬಹುಮತ ಸಾಧಿಸಿದೆ. 120 ಪುರಸಭೆಗಳಲ್ಲಿ 100ಕ್ಕೂ ಹೆಚ್ಚು ಪುರಸಭೆಗಳಲ್ಲಿ ಗೆಲುವು ಸಾಧಿಸಿದ ಜೊತೆಗೆ, 9 ನಗರಪಾಲಿಕೆಳಲ್ಲಿ 7ರಲ್ಲಿ ಟಿಆರ್‌ಎಸ್ ಜಯ ಸಾಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News