ನೂರು ಪದವಿ ಪೂರ್ವ ವಸತಿ ಕಾಲೇಜುಗಳ ಸ್ಥಾಪನೆ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

Update: 2020-01-26 18:59 GMT

ಬಾಗಲಕೋಟೆ, ಜ. 26: ರಾಜ್ಯದಲ್ಲಿ ನೂರು ಪದವಿ ಪೂರ್ವ ವಸತಿ ಕಾಲೇಜುಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ಇಲ್ಲಿನ ನವನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಸತಿ ನಿಲಯ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 824 ವಸತಿ ಶಾಲೆಗಳಿದ್ದು, 450 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಗಳಿವೆ.

ಈ ವರ್ಷ 8 ವಸತಿ ಶಾಲೆಗಳಿಗೆ ತಲಾ 25 ಕೋಟಿ ರೂ.ವೆಚ್ವದಲ್ಲಿ ಕಟ್ಟಡ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಮುಂದಿನ ವರ್ಷ ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ 1ಸಾವಿರ ಕೋಟಿ ರೂ.ಮೀಸಲಿಡಲಾಗುವುದು. 1ಸಾವಿರ ವಸತಿ ನಿಲಯಗಳ ಕಟ್ಟಡಗಳನ್ನು ನಿರ್ಮಿಸಲು ಕೇಂದ್ರ ಸರಕಾರವು ಅನುದಾನ ನೀಡಲು ಒಪ್ಪಿದೆ.

ಈ ಕುರಿತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಕೇಂದ್ರ ಸಚಿವರು ಶೀಘ್ರ ಅನುದಾನ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತಿದೆ.

ಮುಂದಿನ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟರಿಗೆ ಶಿಕ್ಷಣ, ನೀರಾವರಿ, ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡಿ ಕಾರ್ಯಕ್ರಮ ರೂಪಿಸಲಾಗುವುದು. ಪರಿಶಿಷ್ಟರು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ವ್ಯಾಸಂಗ ಪಡೆದು ಸ್ವಾವಲಂಬಿಗಳಾಗಬೇಕೆಂದು ಅವರು ಕರೆ ನೀಡಿದರು.

ಶಾಸಕರಾದ ಡಾ.ವೀರಣ್ಣ ಚರಂತಿಮಠ, ಹಣಮಂತ ನಿರಾಣಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ರಾಜೇಂದ್ರ, ಜಿ.ಪಂ ಸಿಇಓ ಗಂಗೂಬಾಯಿ ಮನಕರ್, ಎಸ್ಪಿ ಲೋಕೇಶ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕ ಸಂಗಪ್ಪ ಸೇರಿ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News