ಜೊಕೊವಿಕ್, ಫೆಡರರ್ ಕ್ವಾರ್ಟರ್ ಫೈನಲ್ ಪ್ರವೇಶ

Update: 2020-01-27 04:12 GMT

ಮೆಲ್ಬೋರ್ನ್, ಜ.26: ಹಾಲಿ ಚಾಂಪಿಯನ್ ನೊವಾಕ್ ಜೊಕೊವಿಕ್ ಹಾಗೂ ಸ್ವಿಸ್ ಸೂಪರ್‌ಸ್ಟಾರ್ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ರವಿವಾರ ನಡೆದ ಪುರುಷರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ನಿಧಾನಗತಿಯ ಆರಂಭದಿಂದ ಚೇತರಿಸಿಕೊಂಡ ಫೆಡರರ್ ಹಂಗೇರಿಯದ ಮಾರ್ಟನ್ ಫುಸೊವಿಕ್ಸ್ ವಿರುದ್ಧ 4-6, 6-1, 6-2, 6-2 ಸೆಟ್‌ಗಳ ಅಂತರದಿಂದ ಜಯ ಸಾಧಿಸಿದರು. ಆರು ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಜಯಿಸಿರುವ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಲ್ಲಿ 15ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದರು. 20 ಗ್ರಾನ್‌ಸ್ಲಾಮ್ ಒಡೆಯನಾಗಿರುವ ಫೆಡರರ್ ಮುಂದಿನ ಸುತ್ತಿನಲ್ಲಿ ಅಮೆರಿಕದ ಟೆನ್ನಿಸ್ ಸ್ಯಾಂಡ್‌ಗ್ರೆನ್‌ರನ್ನು ಎದುರಿಸಲಿದ್ದಾರೆ. ಸ್ಯಾಂಡ್‌ಗ್ರೆನ್ ಮತ್ತೊಂದು ಪಂದ್ಯದಲ್ಲಿ 12ನೇ ಶ್ರೇಯಾಂಕದ ಫ್ಯಾಬಿಯೊ ಫೊಗ್ನಿನಿ ಅವರನ್ನು 7-6(5),7-5, 6-7(2), 6-4 ಸೆಟ್‌ಗಳ ಅಂತರದಿಂದ ಮಣಿಸಿದರು.

ಜೊಕೊವಿಕ್ ಜಯಭೇರಿ: ಏಳು ಬಾರಿಯ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಜೊಕೊವಿಕ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ಮುಂದುವರಿಸಿದರು. 2 ಗಂಟೆಗಳ ಕಾಲ ನಡೆದ ಪುರುಷರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಅರ್ಜೆಂಟೀನದ ಡಿಯಾಗೊ ಸ್ಚೆವರ್ಟ್‌ಮನ್‌ರನ್ನು 6-3, 6-4, 6-4 ಸೆಟ್‌ಗಳಿಂದ ಮಣಿಸಿದ ಜೊಕೊವಿಕ್ ಮೆಲ್ಬೋರ್ನ್ ಪಾರ್ಕ್‌ನಲ್ಲಿ 11ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದರು.

ಎರಡನೇ ಶ್ರೇಯಾಂಕದ ಜೊಕೊವಿಕ್ ಮುಂದಿನ ಸುತ್ತಿನಲ್ಲಿ ಕೆನಡಾದ ಮಿಲೊಸ್ ರಾವೊನಿಕ್‌ರನ್ನು ಎದುರಿಸಲಿದ್ದಾರೆ. ಜೊಕೊವಿಕ್ ಅವರು 2015ರ ಆಸ್ಟ್ರೇಲಿಯನ್ ಓಪನ್ ಕ್ವಾರ್ಟರ್ ಫೈನಲ್ ಸಹಿತ ರಾವೊನಿಕ್ ವಿರುದ್ಧ ಈ ತನಕ ಆಡಿರುವ ಎಲ್ಲ 9 ಪಂದ್ಯಗಳನ್ನು ಜಯಿಸಿದ್ದಾರೆ.

 ಮತ್ತೊಂದು ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ರಾವೊನಿಕ್ ಕ್ರೋಯೇಶಿಯದ ಮರಿನ್ ಸಿಲಿಕ್‌ರನ್ನು 6-4, 6-3,7-5 ಸೆಟ್‌ಗಳ ಅಂತರದಿಂದ ಮಣಿಸಿದ್ದಾರೆ. 29ರ ಹರೆಯದ ರಾವೊನಿಕ್ ಟೂರ್ನಿಯ ಮೊದಲ ವಾರದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದು ಈ ತನಕ ಒಂದೂ ಸೆಟ್‌ನ್ನು ಸೋತಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News