ಅಮರನಾಥ ಶೆಟ್ಟಿ ನಿಧನಕ್ಕೆ ಸಿಎಂ ಸೇರಿ ಗಣ್ಯರ ಕಂಬನಿ

Update: 2020-01-27 15:02 GMT

ಬೆಂಗಳೂರು, ಜ. 27: ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಜ್ಜನ ರಾಜಕಾರಣಿ: ರಾಮಕೃಷ್ಣ ಹೆಗಡೆ ಹಾಗೂ ಜೆ.ಎಚ್.ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅಮರನಾಥ ಶೆಟ್ಟಿ ಅವರು ಒಬ್ಬ ಸರಳ ಸಜ್ಜನ ರಾಜಕಾರಣಿ ಆಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಅಮರನಾಥ ಶೆಟ್ಟಿ ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಜನಾನುರಾಗಿ: ‘ಜಾತ್ಯತೀತ ಜನತಾ ದಳದ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಜನತಾದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು ತಮ್ಮ ಸರಳ-ಸಜ್ಜನಿಕೆಯ ಸ್ವಭಾವದಿಂದ ಜನಾನುರಾಗಿಯಾಗಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಸಂತಾಪ ತಿಳಿಸಿದ್ದಾರೆ.

‘ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಪ್ರಧಾನಿ ದೇವೇಗೌಡ ಕಂಬನಿ ಮಿಡಿದಿದ್ದಾರೆ.

‘ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡ ಅಮರನಾಥ ಶೆಟ್ಟಿಯವರು ವಿಧಿವಶರಾಗಿರುವುದು ದುಃಖ ತಂದಿದೆ. ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತೆ ಆಗಿದೆ’

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News