ಮಾಸಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಬಿಎಸ್‌ವೈ

Update: 2020-01-27 16:43 GMT

ಹಾಸನ, ಜ.27: ಈ ಮಾಸಾಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಸಿಂಗನಕುಪ್ಪೆ ಗ್ರಾಮದ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವೋಸ್ ಭೇಟಿ ಅತ್ಯಂತ ಫಲಪ್ರದವಾಗಿದೆ. ರಾಜ್ಯದಲ್ಲಿ ಅನೇಕ ಮಂದಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಹಲವು ಕೈಗಾರಿಕೋದ್ಯಮಿಗಳು ನಮ್ಮ ರಾಜ್ಯಕ್ಕೆ ಬರಲು ಒಪ್ಪಿದ್ದಾರೆ ಎಂದರು. 40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿನಂತಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಎಸ್‍ಎಂ. ಕೃಷ್ಣ ಅವರ ನಂತರ 16 ವರ್ಷಗಳು ಕಳೆದ ಮೇಲೆ ತಾನು  ದಾವೋಸ್‍ಗೆ ಹೋಗಿದ್ದು, ತುಂಬಾ ಉಪಯುಕ್ತವಾಗಿದೆ. ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿ ಮಾಡಲು ಭರವಸೆ ದೊರೆತಿದೆ. ಇದರಿಂದ ಕೃಷಿ, ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್‍ ನಾರಾಯಣ್, ಸಚಿವ ವಿ.ಸೋಮಣ್ಣ, ಶಾಸಕ ಸಾ.ರಾ ಮಹೇಶ್, ಮಾಜಿ ಸಚಿವ ಎ. ಮಂಜು, ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನಿವಾಸ್ ಸೆಪಟ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ವಿಭಾಗಾಧಿಕಾರಿ ನವೀನ್ ಭಟ್ ಸ್ಥಳದಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News