ಸರಕಾರಿ ಭೂ ಕಬಳಿಕೆ ಆರೋಪ: ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹಿಸಿ ಧರಣಿ

Update: 2020-01-27 18:31 GMT

ಬೆಂಗಳೂರು, ಜ.27: ಬೆಂಗಳೂರು ಪೂರ್ವ ತಾಲೂಕಿನಲ್ಲಿ ಪ್ರಭಾವಿಗಳು ಸರಕಾರಿ ಜಾಗ ಕಬಳಿಸಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಪುರಭವನದ ಎದುರು ಜಮಾಯಿಸಿದ ಕಾರ್ಯಕರ್ತರು, ಸರಕಾರಿ ಜಮೀನು ಕಬಳಿಕೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಸರಕಾರಿ ಸ್ವತ್ತು ಉಳಿಸಿಕೊಳ್ಳಲು ಪಾಲಿಕೆ ಹಾಗೂ ಸರಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಘಟನೆ ರಾಜ್ಯಾಧ್ಯಕ್ಷ ಎನ್.ವೆಂಕಟೇಶ್, ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ, ಚನ್ನಸಂದ್ರ, ವರ್ತೂರು, ಮುಳ್ಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸರಕಾರ ಭೂಮಿ ಕಬಳಿಕೆ ಹೆಚ್ಚಾಗಿದೆ. ಸರಕಾರಿ ವಸತಿ ಯೋಜನೆಗಳಿಗೆ ಮೀಸಲಾದ ಜಾಗಗಳನ್ನು ಪ್ರಭಾವಿಗಳು ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ. ಕೆಲವರು ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆ ಬಾಳುವ ಭೂಮಿಯನ್ನು ವಶಕ್ಕೆ ಪಡೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಕ್ರಮ ಭೂ ವ್ಯವಹಾರದಲ್ಲಿ ಪ್ರಭಾವಿಗಳೊಂದಿಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕೈಜೋಡಿಸಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಆಯ್ಕೆಯಾದ ಫಲಾನುಭವಿಗಳು ನಿವೇಶನ ಮಂಜೂರಾತಿಗೆ ಕಾದು ಕುಳಿತಿದ್ದಾರೆ. ಇತ್ತ ಯೋಜನೆಗಳಿಗೆ ಮೀಸಲಾದ ನಿವೇಶನಗಳನ್ನು ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ಅಕ್ರಮಗಳ ಕುರಿತಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ತಪ್ಪಿತ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News