ಮೈತ್ರಿ ಸರಕಾರದ ಕಾಮಗಾರಿಗಳಿಗೆ ತಡೆ: ಬಿಜೆಪಿ ಸರಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ

Update: 2020-01-28 14:32 GMT

ಬೆಂಗಳೂರು, ಜ.28: ಕಳೆದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಘೋಷಿಸಿದ್ದ 8,015 ಕೋಟಿ ಮೊತ್ತದ ಯೋಜನೆಗಳ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ತಡೆ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.  

ನಗರಾಭಿವೃದ್ಧಿ ಕಾಮಗಾರಿಗಳ ಟೆಂಡರ್‌ಗಳಿಗೆ ತಡೆ ನೀಡಿರುವ ಸರಕಾರದ ಕ್ರಮ ಪ್ರಶ್ನಿಸಿ ಕೆರೆ ಅಭಿವೃದ್ಧಿ ಟ್ರಸ್ಟ್‌ಗಳು ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಹಾಗೂ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರು, ಬಿಬಿಎಂಪಿ ಮನವಿ ಹಾಗೂ ಸಚಿವ ಸಂಪುಟದ ನಿರ್ಧಾರದ ಬಳಿಕವೇ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕರೆಯಲಾಗಿತ್ತು. ಆದರೆ, ಸಿಎಂ ಇದೀಗ ಕಾಮಗಾರಿಗಳಿಗೆ ಕಾನೂನು ಬಾಹಿರವಾಗಿ ತಡೆ ನೀಡಿದ್ದಾರೆ ಎಂದು ಆರೋಪಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮುಖ್ಯಮಂತ್ರಿ ಯಾವ ಅಧಿಕಾರ ಬಳಸಿ ಈ ಆದೇಶ ಹೊರಡಿಸಿದ್ದಾರೆ? ಟಿಪ್ಪಣಿ ಬರೆದು ಎಲ್ಲ ಕಾಮಗಾರಿಗಳನ್ನು ನಿಲ್ಲಿಸುವುದು ಸರಿಯೇ? ಬಿಬಿಎಂಪಿಗೆ ನಿರ್ದೇಶನ ನೀಡುವ ಅಧಿಕಾರ ಸರಕಾರಕ್ಕೆ ಇರಬಹುದು. ಆದರೆ, ಇದು ಸರಿಯಾದ ವಿಧಾನ ಅಲ್ಲ. ಕಾಮಗಾರಿ ವಿಳಂಬದಿಂದ ಕಾಮಗಾರಿ ವೆಚ್ಚ ಹೆಚ್ಚಾದರೆ ಅದಕ್ಕೆ ಹೊಣೆ ಯಾರು? ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಯೋಜನೆಗಳನ್ನು ಹೊಸ ಸಿಎಂ ಅಧಿಕಾರಕ್ಕೆ ಬಂದ ತಕ್ಷಣ ಹೀಗೆ ತಡೆಹಿಡಿಯಬಹುದೇ? ಯಾವ ಕಾನೂನಿನಡಿ ಸಿಎಂ ಈ ಆದೇಶ ಮಾಡಿದ್ದಾರೆ? ಎಂದು ಖಾರವಾಗಿ ಪ್ರಶ್ನಿಸಿದ ಪೀಠ, ಸರಕಾರ ಈ ಕುರಿತು ಸೂಕ್ತ ವಿವರಣೆ ನೀಡಬೇಕು. ಇಲ್ಲವೇ ಆದೇಶವನ್ನು ಹಿಂಪಡೆಯಬೇಕು ಎಂದು ತಾಕೀತು ಮಾಡಿತು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ ನವ ಬೆಂಗಳೂರು ಯೋಜನೆ ಅಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 88 ಕೆರೆಗಳ ಅಭಿವೃದ್ಧಿ, ಪಾದಚಾರಿ ಮಾರ್ಗ ನವೀಕರಣ, ರಾಜಕಾಲುವೆ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಆದರೆ, ಸಿಎಂ ಆಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಬಳಿಕ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಿದ್ದ ಕಾಮಗಾರಿಗಳ ಟೆಂಡರ್‌ಗಳಿಗೆ ಜಾಬ್‌ಕೋಡ್ ನೀಡಲು ನಗರಾಭಿವೃದ್ಧಿ ಇಲಾಖೆ ನಿರಾಕರಿಸಿದೆ. ಯಡಿಯೂರಪ್ಪನೀಡಿದ ಟಿಪ್ಪಣಿ ಆಧರಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಕಾಮಗಾರಿಗಳಿಗೆ ತಡೆ ನೀಡಿದ್ದಾರೆ.

ಸಿಎಂ ಆಗಿ ಬಿಎಸ್‌ವೈ ಅಧಿಕಾರ ವಹಿಸಿಕೊಂಡ ವೇಳೆ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಇದೀಗ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ನೀಡಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News