ಮಂಗಳೂರು ಗೋಲಿಬಾರ್ ಪ್ರಕರಣ: ರಾಜ್ಯ ಸರಕಾರ, ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

Update: 2020-01-28 15:43 GMT

ಬೆಂಗಳೂರು, ಜ.28: ಮಂಗಳೂರು ಗೋಲಿಬಾರ್ ಘಟನೆಯ ತನಿಖೆಗೆ ಎಡಿಜಿಪಿ ದರ್ಜೆ ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಮಂಗಳೂರು ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಘಟನೆ ನಡೆದ ದಿನದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿಡುವಂತೆ ನಿರ್ದೇಶಿಸಿದೆ.

ಈ ಕುರಿತು ಹಿರಿಯ ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಹಾಗೂ ಮಂಗಳೂರಿನ ಮಾಜಿ ಮೇಯರ್ ಕೆ.ಅಶ್ರಫ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಮಂಗಳೂರು ಪೊಲೀಸರು ಏಕಾಏಕಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ನಡೆಸಿದ್ದಾರೆ. ಇದರಿಂದ, ಇಬ್ಬರು ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಈ ಗೋಲಿಬಾರ್ ಕಾನೂನು ವಿರುದ್ಧವಾಗಿದೆ. ಹೀಗಾಗಿ, ಗೋಲಿಬಾರ್ ಘಟನೆಯ ತನಿಖೆಗೆ ಎಸ್‌ಐಟಿ ರಚಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯವರು ಗೋಲಿಬಾರ್‌ನಲ್ಲಿ ಮೃತಪಟ್ಟ ವ್ಯಕ್ತಿಗಳ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಂವಿಧಾನದ ಪರಿಚ್ಛೇದ 19(1), 20 ಮತ್ತು 21 ಅನ್ನು ಪೊಲೀಸರು ಉಲ್ಲಂಘಿಸಿದ್ದಾರೆ. ಹೀಗಾಗಿ, ತನಿಖೆಗೆ ಎಸ್‌ಐಟಿ ರಚಿಸಬೇಕೆಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ವಕೀಲರ ವಾದ ಆಲಿಸಿರುವ ನ್ಯಾಯಪೀಠವು ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಮಂಗಳೂರು ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News