ಸಮಾಜ ಕಲ್ಯಾಣ ಇಲಾಖೆಯ ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ: ಡಿಸಿಎಂ ಕಾರಜೋಳ

Update: 2020-01-29 17:49 GMT

ಬೆಂಗಳೂರು.ಜ.29: ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆಯ ಎಲ್ಲ ಕಾರ್ಯಕ್ರಮ, ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ, ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ. 

ಬುಧವಾರ ವಿಕಾಸ ಸೌಧದಲ್ಲಿ ನಡೆದ ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಸಾಲಿನ ಎಲ್ಲ ಕಾರ್ಯಕ್ರಮ, ಕಾಮಗಾರಿಗಳನ್ನು ಪೂರ್ಣಗೊಳಿಸಿದರೆ ಮುಂದಿನ ಆಯವ್ಯದಲ್ಲಿ ಇನ್ನೂ ಹೆಚ್ಚು ಕಾರ್ಯಕ್ರಮ, ಕಾಮಗಾರಿಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗುತ್ತದೆ. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯು ವಿವಿಧ ಹೆದ್ದಾರಿ ಯೋಜನೆಗಳಡಿ 2015 ಕೋಟಿ ರೂ. ವೆಚ್ಚದಲ್ಲಿ 901 ಕಿ.ಮೀ. ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ವಿವಿಧ ಯೋಜನೆಗಳಡಿ 2578 ಕೋಟಿ ರೂ. ವೆಚ್ಚದಲ್ಲಿ 4769 ಕಿ.ಮೀ. ಜಿಲ್ಲಾ ಮುಖ್ಯರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಎಸ್ಸಿ, ಎಸ್ಟಿಗಳ ಕಾಲನಿಗಳಲ್ಲಿ 1140 ಕಿ.ಮೀ. ಉದ್ದದ ಸಿಸಿ ರಸ್ತೆಗಳನ್ನು 1331 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸಿಎಂಜಿಆರ್‌ಎವೈ ಯೋಜನೆಯಡಿ 566 ಕಿ.ಮೀ. ಉದ್ದದ ಜಿಲ್ಲಾ ಮುಖ್ಯರಸ್ತೆಗಳನ್ನು 323 ಕೋಟಿ ರೂ. ವೆಚ್ಚದಲ್ಲಿ ಅಭಿವದ್ಧಿಪಡಿಸಲಾಗಿದೆ. 320 ಸೇತುವೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ವಿವಿಧ ಇಲಾಖೆಗಳ 145 ಕಟ್ಟಡ ಕಾಮಗಾರಿಗಳನ್ನು 425 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು

ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಮತ್ತು ಸೇತುವೆಗಳ ಪುನಶ್ಚೇತನ ದುರಸ್ತಿಗಾಗಿ 500 ಕೋಟಿ ರೂ. ಅನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ 1816 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ರಸ್ತೆ ಸುರಕ್ಷತಾ ಕಾರ್ಯಕ್ರಮಗಳಡಿ 353 ಕಪ್ಪುಸ್ಥಳಗಳನ್ನು ನಿವಾರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಲೆಗಳ ಬದಿಯಲ್ಲಿ ರಸ್ತೆ ಸುರಕ್ಷತೆ ಹಾಗೂ ಬ್ಯಾರಿಕೇಡಿಂಗ್ ಕಾಮಗಾರಿಗಳನ್ನು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದವು ಬೆಂಗಳೂರು ಸುತ್ತ ಮುತ್ತಲಿನ 158 ಕಿ.ಮೀ. ಉದ್ದದ ನಾಲ್ಕು ರಸ್ತೆಗಳನ್ನು 2095 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪ್ರಗತಿಯ ಹಂತದಲ್ಲಿವೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಗಂಗಕಲ್ಯಾಣ ಯೋಜನೆಯಡಿ 17945 ಪರಿಶಿಷ್ಟ ಜಾತಿ ರೈತರಿಗೆ ಹಾಗೂ 10 ಸಾವಿರ ಪರಿಶಿಷ್ಟ ಪಂಗಡದ ರೈತರಿಗೆ ಕೊಳವೆ ಬಾವಿಗಳನ್ನು ಕೊರೆಯುವ ಕಾಮಗಾರಿಯು ಪ್ರಗತಿಯಲ್ಲಿದೆ. 600 ಕೋಟಿ ರೂ ವೆಚ್ಚದಲ್ಲಿ 196 ವಸತಿ ಶಾಲೆಗಳ ಕಟ್ಟಡಗಳನ್ನು ಪ್ರಾರಂಭಿಸಲಾಗಿದ್ದು, ಈಗಾಗಲೇ 31 ಶಾಲೆಗಳ ಕಟ್ಟಡವನ್ನು ಪೂರ್ಣಗೊಳಿಸಲಾಗಿದೆ. ಭೂ ಒಡೆತನ ಯೋಜನೆಯಡಿ ಭೂರಹಿತ ಕೃಷಿ ಕಾರ್ಮಿಕರಾದ ಪರಿಶಿಷ್ಟ ಜಾತಿಯ 1007 ಫಲಾನುಭಗಳಿಗೆ 1312 ಎಕರೆ ಜಮೀನನ್ನು 123 ಕೋಟಿ ರೂ. ವೆಚ್ಚದಲ್ಲಿ ಹಾಗೂ ಪರಿಶಿಷ್ಟ ಪಂಗಡದ 390 ಫಲಾನುಭಗಳಿಗೆ 601 ಎಕರೆ ಜಮೀನನ್ನು 41 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ನೀಡಲಾಗಿದೆ ಎಂದರು.

ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದಿಂದ 2053 ಚರ್ಮ ಕುಶಲಕರ್ಮಿಗಳಿಗೆ ಸಾಲಸೌಲಭ್ಯ ನೀಡಲಾಗಿದೆ. ಎಲ್ಲ ಇಲಾಖೆಗಳು, ಸಂಸ್ಥೆಗಳಲ್ಲಿ ಈಗವರೆಗೆ ಈಗಾಗಲೇ ಗುರುತಿಸಲಾಗಿರುವ 21376 ಹುದ್ದೆಗಳಲ್ಲಿ 18703 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಉಳಿದ ಹುದ್ದೆಗಳನ್ನು 4 ತಿಂಗಳೊಳಗೆ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ವಾಹನ ಚಾಲನಾ ತರಬೇತಿ ನೀಡಲು ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು. ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News