ಬೀದರ್ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶನ: ಇಬ್ಬರು ಮಹಿಳೆಯರನ್ನು ಬಂಧಿಸಿದ ಪೊಲೀಸರು

Update: 2020-01-30 17:11 GMT
ಸಾಂದರ್ಭಿಕ ಚಿತ್ರ

ಮಂಗಳೂರು: ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮಕ್ಕಳನ್ನು ಬಳಸಿಕೊಂಡು ಪ್ರಧಾನಿಯನ್ನು ಅವಹೇಳನ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ ನಂತರ ಶಾಲೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಯೊಬ್ಬನ ತಾಯಿ ಮತ್ತು ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಮೂಲಗಳು ತಿಳಿಸಿವೆ.

ಈ ಬಗ್ಗೆ 'ವಾರ್ತಾ ಭಾರತಿ' ಬೀದರ್ ಪೊಲೀಸರನ್ನು ಸಂಪರ್ಕಿಸಿದ್ದು,  ಇಬ್ಬರ ಬಂಧನವನ್ನು ಬೀದರ್ ಡಿವೈಎಸ್ಪಿ ಬಸವೇಶ್ವರ ಹೀರಾ ಅವರು ಖಚಿತಪಡಿಸಿದ್ದರೂ, ಹೆಚ್ಚಿನ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ.

ನಾವು ನ್ಯಾಯಾಲಯದಲ್ಲಿ ಹೋರಾಡಲಿದ್ದೇವೆ: ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಖಾದಿರ್

ಶಾಹಿನ್ ಶಿಕ್ಷಣ ಸಂಸ್ಥೆಗಳ ಸಮೂಹದ ಕೆಲವು ಬೋಧಕ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ದುರದೃಷ್ಟಕರ ಎಂದು ಪ್ರತಿಪಾದಿಸಿರುವ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖಾದಿರ್, ಬೋಧಕರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದಿದ್ದಾರೆ.

ಶಾಹಿನ್ ಭಾರತದಲ್ಲಿರುವ ಅಲ್ಪಸಂಖ್ಯಾತರ ಮುಂಚೂಣಿಯ ಶಿಕ್ಷಣ ಸಂಸ್ಥೆ ಮಾತ್ರವಲ್ಲ, ಬದಲಾಗಿ ಮೌಲ್ಯಗಳು ಹಾಗೂ ನೀತಿಯೊಂದಿಗೆ ಉತ್ತಮ ವ್ಯಕ್ತಿಯನ್ನು ರೂಪಿಸುವ ಸಂಸ್ಥೆ ಎಂದು ಹೇಳಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಡಾ. ಖಾದಿರ್, ಸಂಸ್ಥೆಯ ವಿದ್ಯಾರ್ಥಿಗಳು ಸಿಎಎ ವಿರುದ್ಧ ಯಾರಿಗೂ ತೊಂದರೆ ಉಂಟಾಗದಂತೆ ನಾಟಕ ಪ್ರದರ್ಶಿಸಿದರು. ನಮ್ಮಂತಹ ಪ್ರಜಾಪ್ರಭುತ್ವ ಸಮಾಜದಲ್ಲಿ ಪ್ರತಿ ನಾಗರಿಕನಿಗೆ ಯಾವುದೇ ವಿಷಯದ ಬಗ್ಗೆ ಯಾವುದೇ ರೀತಿಯಲ್ಲಿ ಅಭಿವ್ಯಕ್ತಿಸುವ ಹಕ್ಕು ಇದೆ ಎಂದರು.

ಬೋಧಕ ಸಿಬ್ಬಂದಿ ಮೇಲೆ ಕಠಿಣ ಕಾನೂನಾದ ದೇಶದ್ರೋಹದ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಉತ್ತಮವಲ್ಲ ಎಂದು ಅವರು ಹೇಳಿದರು. ಈ ನಾಟಕವನ್ನು ಶನಿವಾರ ಪ್ರದರ್ಶಿಸಲಾಗಿದೆ ಎಂದು ಹೇಳಲಾಗಿದೆ. ಮರುದಿನ ಈ ನಾಟಕದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಬಿಜೆಪಿ ಕಾರ್ಯಕರ್ತರೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಪೊಲೀಸರು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. 4 ಹಾಗೂ 5ನೇ ತರಗತಿಯ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೇವಲ ನಾಟಕ ಪ್ರದರ್ಶಿಸಿರುವುದಕ್ಕೆ ಸ್ಥಳೀಯ ಅಧಿಕಾರಿಗಳು ಈ ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ನಾವು ಊಹಿಸಿರಲಿಲ್ಲ. ಪೊಲೀಸರು ಆರೋಪಿಗಳು ಎಂದು ಹೆಸರಿಸಿದ ಬೋಧಕರಿಗೆ ನಾವು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಡಾ. ಖಾದಿರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News