×
Ad

ಮಂಗಳೂರು: ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್ಸೈಟ್ ಅನಾವರಣ

Update: 2020-01-31 16:44 IST

ಮಂಗಳೂರು, ಜ.29: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್ಸೈಟ್  (dkwju.in)ನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಸಚಿವರು,  ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಕರೆಸಿಕೊಂಡಿರುವ ಮಾಧ್ಯಮ ರಂಗ ನಾಡಿನ ಅಭಿವೃದ್ಧಿಯಲ್ಲೂ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಸಮ್ಮೇಳನದ ಯಶಸ್ಸಿಗೆ ಶುಭ ಹಾರೈಸುವುದಾಗಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡುತ್ತಾ, 1932ರಲ್ಲಿ ಸ್ಥಾಪನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 35ನೇ ಸಮ್ಮೇಳನ ಕರಾವಳಿಯಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 7 ಮತ್ತು 8ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ಈ ಸಮ್ಮೇಳನದ ಯಶಸ್ವಿ ಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಬ್ರಾಂಡ್ ಮಂಗಳೂರು ಅಂಗವಾಗಿ ಗ್ರೀನ್ ಮಂಗಳೂರು ಕಾರ್ಯಕ್ರಮದ ಪ್ರಯುಕ್ತ ಹೂವಿನ ಗಿಡವನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ದ.ಕ. ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಯವರಿಗೆ ಹಸ್ತಾಂತರಿಸಿದರು. ಶಾಸಕರುಗಳಾದ ಯು.ಟಿ.ಖಾದರ್, ಡಿ.ವೇದವ್ಯಾಸ್ ಕಾಮತ್ , ಡಾ.ಭರತ್ ಶೆಟ್ಟಿ ವೈ., ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಸಂಘದ ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News