ರಾಜ್ಯ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

Update: 2020-01-31 16:16 GMT

ಬೆಂಗಳೂರು, ಜ.31: ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಶುಕ್ರವಾರ ಸಂಜೆ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಪೊಲೀಸ್ ಮಹಾನಿರ್ದೇಶಕಿ ಡಾ.ನೀಲಮಣಿ ಎನ್.ರಾಜು, ಅಧಿಕಾರ ದಂಡವನ್ನು ಪ್ರವೀಣ್ ಸೂದ್‌ಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಡಾ.ನೀಲಮಣಿ ಎನ್.ರಾಜು ನಿವೃತ್ತಿಯಿಂದ ತೆರವಾಗಿರುವ ಸ್ಥಾನಕ್ಕೆ 1986ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್‌ರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

1986ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಪ್ರವೀಣ್ ಸೂದ್, 1989ರಲ್ಲಿ ಮೈಸೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕವಾಗಿದ್ದರು. 1996ರಲ್ಲಿ ಮುಖ್ಯಮಂತ್ರಿಯ ಪದಕ ಪ್ರಶಸ್ತಿಗೆ ಭಾಜನರಾಗಿದ್ದರು. 1999ರಿಂದ ಮೂರು ವರ್ಷಗಳ ಕಾಲ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

2004-07ರಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ, 2008ರಲ್ಲಿ ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ, 2013-14ರಲ್ಲಿ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಬಳ್ಳಾರಿ, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಪ್ರವೀಣ್ ಸೂದ್ ಕರ್ತವ್ಯ ನಿರ್ವಹಿಸಿದ್ದಾರೆ.

2017ರಲ್ಲಿ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದ ಪ್ರವೀಣ್ ಸೂದ್, ನಮ್ಮ 100, ಪಿಂಕ್ ಹೊಯ್ಸಳ, ಸುರಕ್ಷಾ ಆ್ಯಪ್ ಪರಿಚಯಿಸಿದ್ದರು. ಬೆಂಗಳೂರಿನ ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News