ಜಾಮೀನು ರದ್ದು ಕೋರಿ ಅರ್ಜಿ: ನಿತ್ಯಾನಂದ, ಸಿಐಡಿಗೆ ಹೈಕೋರ್ಟ್ ನೋಟಿಸ್

Update: 2020-01-31 17:15 GMT

ಬೆಂಗಳೂರು, ಜ.31: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಗೆ ನೀಡಿರುವ ಜಾಮೀನು ರದ್ದು ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನಿತ್ಯಾನಂದ ಹಾಗೂ ಸಿಐಡಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಲೆನಿನ್ ಪರ ವಾದಿಸಿದ ವಕೀಲರು, ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದನಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಆದರೆ, ಜಾಮೀನು ಷರತ್ತು ಉಲ್ಲಂಘಿಸಿರುವ ಅವರು, ಕೋರ್ಟ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಅವಧಿ ಮುಗಿದಿರುವ ಪಾಸ್ ಪೋರ್ಟ್ ಅಡಿ ದೇಶ ತೊರೆದಿದ್ದಾರೆ. ಆದರೆ ಭಾರತದಲ್ಲಿರುವಂತೆ ವಿನಾಯಿತಿಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಜಾಮೀನು ರದ್ದುಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ನಿತ್ಯಾನಂದ ಮತ್ತು ಸಿಐಡಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣ ವರ್ಗಾವಣೆ ವಿಚಾರ: ನಿತ್ಯಾನಂದ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣವನ್ನು ರಾಮನಗರದ 3ನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ನಿಂದ ಬೇರೆ ಕಡೆಗೆ ವರ್ಗಾವಣೆ ಕೋರಿ ಲೆನಿನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಕೀಲರ ವಾದ ಆಲಿಸಿ ತೀರ್ಪು ಕಾಯ್ದಿರಿಸಿತು.

          

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News