ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಗುವಾಹಟಿ ಉದ್ಯಮಿಗಳಿಗೆ ಆಹ್ವಾನ

Update: 2020-02-04 18:44 GMT

ಬೆಂಗಳೂರು, ಫೆ.4: ಎಫ್‌ಎಂಸಿಜಿ ಕ್ಲಸ್ಟರ್ ನಿರ್ಮಾಣದ ಕುರಿತು ಮಾಹಿತಿ ಪಡೆಯಲು ಹಾಗೂ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ ಆಗಮಿಸುವಂತೆ ಗುವಾಹಟಿಯ ಎಫ್‌ಎಂಸಿಜಿ ವಲಯದ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲು ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗುವಾಹಟಿಯ ಎಫ್‌ಎಂಸಿಜಿ ವಲಯಕ್ಕೆ ಭೇಟಿ ನೀಡಿದರು.

ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಹೂಡಿಕೆ ಮಾಡುವಂತೆ ಹೂಡಿಕೆದಾರರು ಮತ್ತು ಉದ್ಯಮಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಫೆ.14ರಂದು ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ 2020 ಆಯೋಜಿಸಿದ್ದು, ಈ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ಜಗದೀಶ್ ಶೆಟ್ಟರ್ ಕೈಗಾರಿಕಾ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಇಂದು ಗುವಾಹಟಿಗೆ ಭೇಟಿ ನೀಡಿದ್ದರು.

ಫಿಕ್ಕಿಯ ಕರ್ನಾಟಕ ಚಾಪ್ಟರ್ ಹಾಗೂ ಇನ್ವೆಸ್ಟ್ ಕರ್ನಾಟಕ ಫೋರಂ ವತಿಯಿಂದ ಏರ್ಪಡಿಸಿದ್ದ ಹೂಡಿಕೆದಾರರು ಮತ್ತು ಉದ್ಯಮಿಗಳ ಸಭೆಯಲ್ಲಿ ಗುವಾಹಟಿ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಸದಸ್ಯರು ಪಾಲ್ಗೊಂಡಿದ್ದರು. ಕರ್ನಾಟಕವನ್ನು ನಂಬರ್ ಒನ್ ಉದ್ಯಮ ಹೂಡಿಕೆದಾರರ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಂಕಣಬದ್ಧವಾಗಿದ್ದು, ಇದಕ್ಕೆ ಪೂರಕವಾದ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಿದೆ. ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ಇದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಹೂಡಿಕೆಗೆ ವಿಫುಲ ಅವಕಾಶವಿದೆ. ಹುಬ್ಬಳ್ಳಿ ಧಾರವಾಡ ವಲಯದಲ್ಲಿ ಎಫ್‌ಎಂಸಿಜಿ ಕ್ಲಸ್ಟರ್ ಸ್ಥಾಪನೆಗೆ ಸರಕಾರ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ ಎಂದು ಕೈಗಾರಿಕೋದ್ಯಮಿಗಳಿಗೆ ಜಗದೀಶ್ ಶೆಟ್ಟರ್ ವಿವರಣೆ ನೀಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಮ್ಮ ಸರಕಾರವು ಬಂಡವಾಳ ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಉದ್ಯಮಗಳನ್ನು ಆರಂಭ ಮಾಡಲು ಮತ್ತು ಹೂಡಿಕೆ ಮಾಡಲು ಪೂರಕವಾದ ನೀತಿಗಳನ್ನು ಜಾರಿ ಮಾಡುತ್ತಿದ್ದು, ಅವರಿಗೆ ಅನುಕೂಲಕರವಾದ ಯೋಜನೆಗಳನ್ನು ಮಾಡಿಕೊಡುತ್ತಿದೆ.

2ನೆ ಮತ್ತು 3ನೆ ಹಂತದ ನಗರಗಳಲ್ಲಿಯೂ ಉದ್ಯಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದೆ. ಇದಕ್ಕೆ ಪೂರಕವಾಗಿ ಹುಬ್ಬಳ್ಳಿ ಧಾರವಾಡ ವಲಯದಲ್ಲಿ ಉದ್ಯಮ ಕ್ಷೇತ್ರದ ಉತ್ತೇಜನಕ್ಕಾಗಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಉತ್ತರ ಕರ್ನಾಟಕ ಭಾಗವೂ ಉದ್ಯಮ ಸ್ನೇಹಿ ಪ್ರದೇಶವಾಗಿದ್ದು, ಅಲ್ಲಿ ಉದ್ಯಮಗಳನ್ನು ಸ್ಥಾಪಿಸಲು ವಿಪುಲ ಅವಕಾಶಗಳನ್ನು ಕಲ್ಪಿಸಲು ಸರಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಅಲ್ಲಿನ ಅವಕಾಶಗಳನ್ನು ಪರಿಶೀಲಿಸಿ ಹೂಡಿಕೆ ಮಾಡುವಂತೆ ಶೆಟ್ಟರ್ ಗುವಾಹಟಿಯ ಉದ್ಯಮಿಗಳಿಗೆ ಮನವಿ ಮಾಡಿದರು.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಉದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗುವ ರೀತಿಯಲ್ಲಿ ನಮ್ಮ ಸರಕಾರ ಹೊಸ ಕೈಗಾರಿಕಾ ನೀತಿಯನ್ನು ರೂಪಿಸಿದೆ. ಈ ಹೊಸ ನೀತಿಯು ಹುಬ್ಬಳ್ಳಿ-ಧಾರವಾಡ ವಲಯದಲ್ಲಿ ಹೂಡಿಕೆ ಮಾಡಲು ಎಲ್ಲ ರೀತಿಯ ಅನುಕೂಲಗಳನ್ನು ಉದ್ಯಮಿಗಳಿಗೆ ಕಲ್ಪಿಸಲಿದೆ ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News