ಶಾಹೀನ್ ಸಂಸ್ಥೆ ಮೇಲಿನ ದೇಶದ್ರೋಹ ಪ್ರಕರಣ ಹಿಂಪಡೆಯಿರಿ: ಡಿಜಿಗೆ ಕಾಂಗ್ರೆಸ್ ಮನವಿ
ಬೆಂಗಳೂರು, ಫೆ.5: ಬೀದರ್ ಜಿಲ್ಲೆಯ ಶಾಹೀನ್ ಶಾಲಾ ಶಿಕ್ಷಣ ಸಂಸ್ಥೆ ಮೇಲೆ ದಾಖಲು ಮಾಡಿರುವ ದೇಶದ್ರೋಹ ಪ್ರಕರಣವನ್ನು ಈ ಕೂಡಲೇ ವಾಪಸ್ಸು ಪಡೆಯಬೇಕೆಂದು ಪೊಲೀಸ್ ಮಹಾನಿರ್ದೇಶಕರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.
ಬುಧವಾರ ನಗರದ ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಭಾಪತಿ ರಮೇಶ್ ಕುಮಾರ್, ಮಾಜಿ ಸಚಿವರಾದ ತನ್ವೀರ್ ಸೇಠ್, ಯು.ಟಿ ಖಾದರ್, ಶಾಸಕ ರಿಝ್ವಾನ್ ಆರ್ಶದ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಒಳಗೊಂಡ ಮುಖಂಡರ ನಿಯೋಗ ಮನವಿ ಸಲ್ಲಿಸಿ, ಪ್ರಕರಣ ವಾಪಸ್ಸು ಪಡೆಯಬೇಕೆಂದು ಒತ್ತಾಯ ಮಾಡಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಪೊಲೀಸ್ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಶಾಹೀನ್ ಶಾಲೆಯಲ್ಲಿ ಸರಕಾರದ ಕಾಯ್ದೆ ವಿರುದ್ಧ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ದೇಶದ್ರೋಹದ ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಇದನ್ನು ನೋಡಿದರೆ, ಬಿಜೆಪಿ ಪ್ರಕಾರ ದೇಶದ ಶೇಕಡಾ 70ರಷ್ಟು ಜನ ದೇಶದ್ರೋಹಿಗಳಾಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಕಾನೂನುಗಳ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದರೆ, ದೇಶದ್ರೋಹ ಪ್ರಕರಣ ದಾಖಲು ಮಾಡುತ್ತಾರೆ. ಈ ಪ್ರಕರಣದಲ್ಲಿ ಮಕ್ಕಳನ್ನು ತನಿಖೆಗೆ ಒಳಪಡಿಸಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಹೇಳಿದರು.