ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್: ಆರು ಮಂದಿ ಮೃತ್ಯು
ಬೆಳಗಾವಿ, ಫೆ.8: ಟ್ರ್ಯಾಕ್ಟರ್‌ವೊಂದು ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ಇಲ್ಲಿನ ಬೋಗೂರು ಗ್ರಾಮದ ಶೇಖಪ್ಪ ಕೇದಾರಿ(38), ಗುಲಾಬಿ ಹುಣಸಿಕಟ್ಟಿ(35), ಶಾಂತವ್ವ ಅಳಗೋಡಿ(65), ಶಾಂತವ್ವ(63) ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇಟಗಿ- ಬೋಗೂರ ಗ್ರಾಮ ಮಾರ್ಗದಲ್ಲಿರುವ ಸೇತುವೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸುವಾಗ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಖಾನಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಭೇಟಿ: ಘಟನಾ ಸ್ಥಳಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿ ನೀಡಿದರು. ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದೇ ಅಪಘಾತಕ್ಕೆ ಕಾರಣ ಎಂದು ಶಾಸಕಿ ಎದುರು ಗ್ರಾಮಸ್ಥರು ಅಳಲು ತೋಡಿಕೊಂಡರು. ಅಷ್ಟೇ ಅಲ್ಲದೆ, ಕಳೆದ ಎರಡು ವರ್ಷಗಳಿಂದ ಸೇತುವೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೂ, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ದೂರಿದರು.