×
Ad

ಸರ್ಕಾರಿ, ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.75 ರಷ್ಟು ಮೀಸಲಾತಿ

Update: 2020-02-08 20:41 IST

ಬೆಂಗಳೂರು, ಫೆ.8: ರಾಜ್ಯ ಸರಕಾರ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಮೀಸಲಾತಿ ನೀಡುವ ಸಲುವಾಗಿ ವಿಧೇಯಕ ಮಂಡನೆಗೆ ಸಿದ್ಧತೆ ನಡೆಸುತ್ತಿದೆ. 

ಈ ಬಗ್ಗೆ ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, "ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕನ್ನಡ ನಾಡು ನುಡಿಯ ರಕ್ಷಣೆಗೆ ಕಟಿಬದ್ಧವಾಗಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಮೀಸಲಾತಿ ನೀಡುವ ಸಲುವಾಗಿ ವಿಧೇಯಕ ಮಂಡನೆಗೆ ಸಿದ್ಧತೆ ನಡೆಸುತ್ತಿದೆ. ಬಿಜೆಪಿ ಸರ್ಕಾರ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ" ಎಂದು ತಿಳಿಸಿದೆ.

ಈ ಮೂಲಕ ನೆರೆಯ ರಾಜ್ಯವಾದ ಆಂಧ್ರಪ್ರದೇಶದ ಮಾದರಿಯಲ್ಲೇ ಕರ್ನಾಟಕ ಸರ್ಕಾರವೂ ಕೂಡಾ ಉದ್ಯೋಗ ಮೀಸಲಾತಿ ವಿಚಾರದಲ್ಲಿ ದಿಟ್ಟ ಹೆಜ್ಜೆ ಇಡಲು ಸಿದ್ಧತೆ ನಡೆಸುತ್ತಿದೆ. ಅಲ್ಲದೇ, ಕನ್ನಡಿಗರಿಗೆ ಶೇ.75 ಮೀಸಲಾತಿ ಕಲ್ಪಿಸುವ ಉದ್ದೇಶದ ವಿಧೇಯಕದ ಕರಡು ಈಗಾಗಲೇ ಸಿದ್ಧಪಡಿಸಲಾಗಿದ್ದು, ಮುಂದಿನ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ಆಗಾಗ ಕೂಗು ಕೇಳಿ ಬರುತ್ತಿತ್ತು. ಇದೀಗ ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಿಧೇಯಕ ಮಂಡನೆಗೆ ಸಿದ್ಧತೆ ನಡೆಸುತ್ತಿದೆ. 

ಕನ್ನಡ ಪರ ಸಂಘಟನೆಗಳು ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕಾಗಿ ಕಳೆದ 90 ದಿನಗಳಿಂದ ನಗರದಲ್ಲಿ ಧರಣಿ ಕೈಗೊಂಡಿದ್ದು, ಫೆ.13 ಕ್ಕೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಎಸ್‌ವೈ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News