ಕೊಡಗು ಬಿಜೆಪಿ ಮುಕ್ತ ಜಿಲ್ಲೆಯಾಗಲಿದೆ: ಜೆಡಿಎಸ್

Update: 2020-02-10 11:46 GMT

ಮಡಿಕೇರಿ ಫೆ.10: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದರೂ ಕಳೆದ 25 ವರ್ಷಗಳಿಂದ ಬಿಜೆಪಿ ಶಾಸಕರುಗಳನ್ನೇ ಹೊಂದಿರುವ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಟೀಕಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಮುಂದೆ ಕೊಡಗು ಬಿಜೆಪಿ ಮುಕ್ತವಾಗಲಿದೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಸತತವಾಗಿ ಬಿಜೆಪಿ ಪ್ರತಿನಿಧಿಗಳೇ ಗೆಲುವು ಸಾಧಿಸುತ್ತಾ ಬರುತ್ತಿದ್ದಾರೆ. ಅಭಿವೃದ್ಧಿಯ ಚಿಂತನೆಯಡಿ ಇಲ್ಲಿನ ಮತದಾರರು ಬಿಜೆಪಿಗೆ ಬಹುಮತ ನೀಡುತ್ತಲೇ ಬಂದಿದ್ದಾರೆ. ಆದರೆ ಅಧಿಕಾರದ ಗದ್ದುಗೆ ಏರಿದ ನಂತರ ಬಿಜೆಪಿ ನಾಯಕರು ಕೊಡಗನ್ನು ಮರೆತೇ ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ವಂಚಿಸುವ ಮೂಲಕ ಮತದಾರರ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ್ದಾರೆ. ಜಿಲ್ಲೆಯ ಸಮಸ್ಯೆಗಳ ಗಂಭೀರತೆ ಸ್ಥಳೀಯ ಶಾಸಕರುಗಳಿಗೆ ಮಾತ್ರ ತಿಳಿದಿರುವುದರಿಂದ ಸಚಿವ ಸ್ಥಾನ ನೀಡುವ ಅಗತ್ಯವಿತ್ತು. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುರೇಶ್ ಕುಮಾರ್ ಹಾಗೂ ಈಗಿನ ಸಚಿವ ವಿ.ಸೋಮಣ್ಣ ಅವರು ಜಿಲ್ಲೆಗೆ ಅಪರೂಪಕ್ಕೊಮ್ಮೆ ಬಂದು ಹೋಗಿದ್ದಾರೆ ಹೊರತು ಇಲ್ಲಿನ ಯಾವುದೇ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಜಿಲ್ಲೆಯ ಮಳೆಹಾನಿ ಸಂತ್ರಸ್ತರಿಗೆ ಸುಮಾರು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಮನೆಗಳ ನಿರ್ಮಾಣ ಮತ್ತು ನಿರಾಶ್ರಿತರಾದವರಿಗೆ ಮನೆ ಬಾಡಿಗೆಯಾಗಿ ಮಾಸಿಕ ತಲಾ ಹತ್ತು ಸಾವಿರ ರೂ.ಗಳನ್ನು ವಿತರಿಸಿತ್ತು. ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಕಷ್ಟದಲ್ಲಿದ್ದವರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿದ್ದರು. ಆದರೆ ಇಂದಿನ ಬಿಜೆಪಿ ನೇತೃತ್ವದ ಸರ್ಕಾರದಿಂದ ಕೊಡಗು ಜಿಲ್ಲೆಗೆ ಯಾವುದೇ ಲಾಭವಾಗಿಲ್ಲ. 2019 ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ನೊಂದವರಿಗೆ ಇನ್ನೂ ಕೂಡ ಸೂಕ್ತ ರೀತಿಯಲ್ಲಿ ಪರಿಹಾರ ವಿತರಿಸಿಲ್ಲ. ಮನೆಗಳ ನಿರ್ಮಾಣಕ್ಕೆ ಕೇವಲ ತಲಾ 5 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದೆಲ್ಲವೂ ಕೊಡಗು ಜಿಲ್ಲೆಯನ್ನು ಕಡೆಗಣಿಸುತ್ತಿರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಗಣೇಶ್ ಆರೋಪಿಸಿದರು.

ಕೊಡಗನ್ನು ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಾಗಿ ಹೇಳಿಕೊಂಡು ಬಂದ ಬಿಜೆಪಿ ನಾಯಕರಿಗೆ ಇದೀಗ ತಮ್ಮ ಪಕ್ಷದಲ್ಲೇ ಸ್ಥಾನಮಾನವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.

ಜಿಲ್ಲೆಯ ಪ್ರಜ್ಞಾವಂತ ಮತದಾರರು ಬಿಜೆಪಿ ನಾಯಕರ ಸಮಯ ಸಾಧಕ ರಾಜಕಾರಣ ಮತ್ತು ಕೊಡಗಿನ ಕಡೆಗಣನೆಯ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು, ಕೊಡಗು ಬಿಜೆಪಿ ಮುಕ್ತವಾಗುವುದರಲ್ಲಿ ಯಾವುದೇ ಸಂಶಯವಿಲ್ಲವೆಂದರು.     

ಜೆಡಿಎಸ್ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಹಾಗೂ ಎಪಿಎಂಸಿ ಸದಸ್ಯ ಸಿ.ಎಸ್.ನಾಗರಾಜ್ ಮಾತನಾಡಿ ಇತ್ತೀಚೆಗೆ ನಡೆದ ಸಹಕಾರ ಸಂಘಗಳ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದು, ಮುಂಬರುವ ಗ್ರಾ.ಪಂ ಚುನಾವಣೆಯಲ್ಲೂ ಜಿಲ್ಲೆಯಾದ್ಯಂತ ಜೆಡಿಎಸ್ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ ಪಕ್ಷದ ಜಿಲ್ಲಾ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಥವಾ ಗುಂಪುಗಾರಿಕೆಗಳಿಲ್ಲ, ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.    

ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಕಚೇರಿ ಫೆ.16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಚೇಂಬರ್ ಆಫ್ ಕಾಮರ್ಸ್ ಕಟ್ಟಡದ ಮೊದಲನೇಯ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಕೆ.ಎಂ.ಗಣೇಶ್ ತಿಳಿಸಿದರು. 

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಕಚೇರಿಯನ್ನು ಉದ್ಘಾಟಿಸಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಪಿರಿಯಾಪಟ್ಟಣದ ಶಾಸಕ ಕೆ.ಮಹದೇವು ಪಾಲ್ಗೊಳ್ಳಲಿದ್ದಾರೆ. ಮೈಸೂರು ಮಹಾಪೌರರಾದ ತಸ್ಲಿಂ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದರು. 

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಗೌತಮ್, ಮಹಾ ಪ್ರಧಾನ ಕಾರ್ಯದರ್ಶಿ ಆದಿಲ್ ಪಾಷಾ ಹಾಗೂ ಕಾರ್ಯದರ್ಶಿ ಎನ್.ಸಿ.ಸುನೀಲ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News