×
Ad

ಪೊಲೀಸರಿಂದ ದೌರ್ಜನ್ಯ ಆರೋಪ: ಜಾಮಿಯಾ ವಿದ್ಯಾರ್ಥಿಯ ಮನವಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

Update: 2020-02-11 19:59 IST

ಹೊಸದಿಲ್ಲಿ, ಫೆ. 11: ಕಳೆದ ವರ್ಷ ಡಿಸೆಂಬರ್ 15ರಂದು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸರು ನಡೆಸಿದ ಪ್ರತಿಭಟನೆ ನಿಗ್ರಹದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮಿತಿಯೊಂದರಿಂದ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಸಲಾದ ಮನವಿ ಕುರಿತು ಪ್ರತಿಕ್ರಿಯೆ ನೀಡುವಂತೆ ದಿಲ್ಲಿ ಉಚ್ಚ ನ್ಯಾಯಾಲಯ ಮಂಗಳವಾರ ಕೇಂದ್ರ ಸರಕಾರಕ್ಕೆ ತಿಳಿಸಿದೆ.

ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರದಲ್ಲಿ ಒಂದು ಕಣ್ಣಿನ ದೃಷ್ಟಿಗೆ ಹಾನಿಯಾಗಿರುವ ಹಾಗೂ ದೃಷ್ಟಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಜಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಲ್ಲಿಸಿದ ಮನವಿಯ ಕುರಿತು ನಿಲುವು ಕೋರಿ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಹಾಗೂ ನ್ಯಾಯಮೂರ್ತಿ ಸಿ. ಹರಿ ಶಂಕರ್ ಅವರನ್ನು ಒಳಗೊಂಡ ಪೀಠ ಕೇಂದ್ರ ಸರಕಾರ ಹಾಗೂ ದಿಲ್ಲಿ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ.

ಕಣ್ಣಿನ ದೃಷ್ಟಿಗೆ ಹಾನಿಯಾಗಿರುವುದರಿಂದ ತನ್ನ ವಿದ್ಯಾರ್ಹತೆಗೆ ಅನುಗುಣವಾಗಿ ಪರಿಹಾರ ನೀಡುವಂತೆ ಹಾಗೂ ಘಟನೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರುದಾರ ಮುಹಮ್ಮದ್ ಮಿನ್ಹಾಜುದ್ದೀನ್ ಮನವಿಯಲ್ಲಿ ಕೋರಿದ್ದಾರೆ.

 ತನ್ನ ಚಿಕಿತ್ಸೆಯ ವೆಚ್ಚ ಭರಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡುವಂತೆ ಹಾಗೂ ಪರಿಹಾರಾರ್ಥವಾಗಿ ತನ್ನ ವಿದ್ಯಾರ್ಹತೆಗೆ ಅನುಗುಣವಾಗಿ ಖಾಯಂ ಉದ್ಯೋಗ ನೀಡುವಂತೆ ಕೂಡಾ ಮಿನ್ಹಾಜುದ್ದೀನ್ ಮನವಿಯಲ್ಲಿ ಆಗ್ರಹಿಸಿದ್ದಾರೆ. ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವರ್ಷ ನಡೆದ ಪ್ರತಿಭಟನೆ ಸಂದರ್ಭ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಾಮಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಒಳಗೆ ಪ್ರವೇಶಿಸಿ ಲಾಠಿ ಪ್ರಹಾರ ನಡೆಸಿದ್ದರು. ಅಶ್ರುವಾಯು ಸೆಲ್‌ಗಳನ್ನು ಸಿಡಿಸಿದ್ದರು. ಇದರಿಂದ ದೂರುದಾರ ಸೇರಿದಂತೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News