ಶಾಸಕ ಎಸ್.ಎ.ರಾಮದಾಸ್‍ಗೆ ಹೃದಯಾಘಾತ
ಮೈಸೂರು,ಫೆ.11: ಶಾಸಕ ಎಸ್.ಎ.ರಾಮದಾಸ್ ಅವರಿಗೆ ಹೃದಯಾಘಾತವಾಗಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟೆಂಟ್ ಅಳವಡಿಸಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಒಂಟಿಕೊಪ್ಪಲಿನ ಅವರ ನಿವಾಸದಲ್ಲಿ ಸೋಮವಾರ ಮಧ್ಯರಾತ್ರಿ 2.30ರ ಸುಮಾರಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಅವರ ಕಾರು ಚಾಲಕ ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ತಪಾಸಣೆ ನಡೆಸಿ ಇಸಿಜಿ ಮಾಡಿದಾಗ ಹೃದಯಾಘಾತವಾಗಿರುವುದು ದೃಢಪಟ್ಟಿದ್ದರಿಂದ ತಕ್ಷಣವೇ ಅಂಜಿಯೋಪ್ಲಾಸ್ಟ್ ಮಾಡಿ ಸ್ಟೆಂಟ್ ಅಳವಡಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ಐಐಸಿಯು ವಾರ್ಡಿನ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಂಗಳವಾರ ಮಾಧ್ಯಮದವರೊಂದಿಗೆ ಆಸ್ಪತ್ರೆ ವೈದ್ಯ ಡಾ.ಆದಿತ್ಯ ಉಡುಪ ಮಾತನಾಡಿ, ಶಾಸಕ ಎಸ್.ಎ.ರಾಮದಾಸ್ ಅವರ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅಪಾಯ ತಪ್ಪಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ಸಕ್ಕರೆ ಕಾಯಿಲೆ ಇದ್ದು, ಹೆಚ್ಚಿನ ತಲೆನೋವಿನಿಂದ ಬಳಲುತ್ತಿದ್ದಾರೆ. ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರಿಂದ ಸಕ್ಕರೆ ಕಾಯಿಲೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟೆಂಟ್ ಹಾಕಿದಾಗ ಆಯುರ್ವೇದ ಔಷಧ ಸ್ಥಗಿತಗೊಳಿಸಿ, ಇಂಗ್ಲಿಷ್ ಔಷಧ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.
ರಾಮದಾಸ್ ಅವರಿಗೆ ಹೃದಯಾಘಾತವಾಗಿರುವ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ರಾಮದಾಸ್ ಅವರ ಆರೋಗ್ಯ ವಿಚಾರಿಸಿದರು. ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಶಾಸಕ ಎಲ್.ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಸೇರಿದಂತೆ ಅನೇಕ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರಲ್ಲದೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಚ್.ವಿಜಯಶಂಕರ್, ರಾಮದಾಸ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಸ್ಟೆಂಟ್ ಅಳವಡಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.