ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಫೆ.15ರಿಂದ ಬೆಳಗಾವಿಯಿಂದ ಬೆಂಗಳೂರಿಗೆ ಪ್ರತಿಭಟನಾ ರ‍್ಯಾಲಿ
ಬೆಂಗಳೂರು, ಫೆ.12: ಕರ್ನಾಟಕ ಪರ ಸಂಘಟನೆಗಳ ಒಕ್ಕೂಟವು ಮಹಾದಾಯಿ ಯೋಜನೆ ಜಾರಿ, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ.15ರಿಂದ 18 ರವರೆಗೆ ಬೆಳಗಾವಿಯಿಂದ ಬೆಂಗಳೂರಿನವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಒಕ್ಕೂಟದ ಅಧ್ಯಕ್ಷ ಡಾ. ವಿಶ್ವನಾಥ್ ತಿಳಿಸಿದ್ದಾರೆ.
ಬುಧವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.15ರಂದು ಬೆಳಗಾವಿಯಲ್ಲಿ ಬೆಳಗ್ಗೆ 10ಕ್ಕೆ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಅಲ್ಲಿನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಆನಂತರ ಬಹಿರಂಗ ಸಭೆ ನಡೆಸಿ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಫೆ.18 ರಂದು ಬೆಳಗ್ಗೆ 10ಕ್ಕೆ ನಗರದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಬಹಿರಂಗ ಸಭೆ ನಡೆಸಿ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವುದು ಹಾಗೂ ಕರ್ನಾಟಕದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ, ಡಾ.ಸರೋಜಿನಿ ಮಹಿಷಿ ವರದಿ ಜಾರಿ, ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಅವರ ಹೆಸರಿಡುವುದು, ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದು, ಔರಾದ್ಕರ್ ವರದಿ ಜಾರಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು.