2020ರ ಮಾರ್ಚ್ ವೇಳೆಗೆ 5,155 ಪೊಲೀಸ್ ಹುದ್ದೆಗಳ ಭರ್ತಿ: ಹೈಕೋರ್ಟ್‌ಗೆ ಹೇಳಿಕೆ

Update: 2020-02-12 17:29 GMT

ಬೆಂಗಳೂರು, ಫೆ.12: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 615 ಸಬ್ ಇನ್ಸ್‌ಪೆಕ್ಟರ್ ಹಾಗೂ 4540 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು 2020ರ ಮಾರ್ಚ್ ವೇಳೆಗೆ ಭರ್ತಿ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ಗೃಹ ಇಲಾಖೆಯು ಪ್ರಮಾಣ ಪತ್ರ ಸಲ್ಲಿಸಿದೆ.

ಈ ಕುರಿತು ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. 2021-22ರ ಮಾರ್ಚ್ ವೇಳೆಗೆ 5,701 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಕಾರ್ಯ ಮುಂದುವರೆದಿದೆ ಎಂದು ಸರಕಾರದ ಪರ ವಕೀಲರು ಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.

ಪ್ರಮಾಣ ಪತ್ರವನ್ನು ಮಾನ್ಯ ಮಾಡಿದ ನ್ಯಾಯಪೀಠವು ಮುಂದಿನ ವಿಚಾರಣೆ ವೇಳೆ ಎಷ್ಟು ಪೊಲೀಸ್ ಹುದ್ದೆಗಳು ಮಂಜೂರಾಗಿವೆ? ಎಷ್ಟು ಮಂದಿಗೆ ಹುದ್ದೆಗಳಿಗೆ ಭಡ್ತಿ ನೀಡಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News