ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಪೊಲೀಸ್ ಪೇದೆ ಅಮಾನತು
ಬೆಂಗಳೂರು, ಫೆ.13: ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ಕೇಳಿ ಬಂದ ಹಿನ್ನೆಲೆ ಓರ್ವ ಪೊಲೀಸ್ ಪೇದೆಯನ್ನು ಅಮಾನತು ಮಾಡಿ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಆದೇಶ ಹೊರಡಿಸಿದ್ದಾರೆ.
ನಗರದ ಪುಟ್ಟೇನಹಳ್ಳಿ ಠಾಣಾ ಪೊಲೀಸ್ ಪೇದೆ ಎಸ್.ಆರ್.ವಾಲೀಕರ್ ಎಂಬುವರನ್ನು ಅಮಾನತು ಮಾಡಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಗೃಹ ರಕ್ಷಕ ದಳದ ಸಿಬ್ಬಂದಿ ಗಿರೀಶ್‌ರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಫೆಬ್ರವರಿ 10ರಂದು ರಾತ್ರಿ ಪುಟ್ಟೇನಹಳ್ಳಿ ಮುಖ್ಯರಸ್ತೆಯ ಅಪರಂಜಿ ಬಿರಿಯಾನಿ ಮನೆ ಹೊಟೇಲ್ ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ಬೈಕ್‌ನಲ್ಲಿ ಬಂದು, ಅಲ್ಲಿನ ಸಿಬ್ಬಂದಿ ಅಭಿ ಎಂಬುವರ ಮೇಲೆ ಹಲ್ಲೆ ನಡೆಸಿ ಹಣ ನೀಡಿ ಎಂದು ಬೇಡಿಕೆ ಹಾಕಿದ್ದ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.
ಈ ವಿಚಾರ ತಿಳಿದ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್, ಘಟನೆಯ ಕುರಿತು ತನಿಖೆ ನಡೆಸುವಂತೆ ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿಗೆ ಆದೇಶಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಪೊಲೀಸ್ ಸಿಬ್ಬಂದಿಯ ತಪ್ಪುಕಂಡು ಬಂದ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೂ ಅಮಾನತಿನಲ್ಲಿರಲು ಆದೇಶ ಹೊರಡಿಸಲಾಗಿದೆ.