ಕೇಂದ್ರ ಸರಕಾರದ ದಲಿತ, ಹಿಂದುಳಿದ ವಿರೋಧಿ ನಿಲುವಿಗೆ ಕಾಂಗ್ರೆಸ್ ಖಂಡನೆ

Update: 2020-02-13 15:34 GMT

ಹೈದರಾಬಾದ್, ಫೆ. 12: ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ದಲಿತ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ನಿಲುವಿನ ವಿರುದ್ಧ ಸಾಮೂಹಿಕ ಪ್ರತಿಭಟನೆ ನಡೆಸಲು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಟಿಪಿಸಿಸಿ ರಾಜ್ಯ ವರಿಷ್ಠ ಎನ್ ಉತ್ತಮ್ ಕುಮಾರ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗಾಂಧಿ ಭವನದಲ್ಲಿ ಬುಧವಾರ ನಡೆದ ಟಿಪಿಸಿಸಿಯ ಹಿರಿಯ ನಾಯಕರ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ಬಳಿಕ ಮಾಧ್ಯಮ ಉದ್ದೇಶಿಸಿ ಮಾತನಾಡಿದ ಉತ್ತಮ್ ಕುಮಾರ್ ರೆಡ್ಡಿ, ಸರಕಾರಿ ಉದ್ಯೋಗದಲ್ಲಿ ನೇಮಕಾತಿ ಹಾಗೂ ಭಡ್ತಿಯಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಈ ಬಗ್ಗೆ ಒಂದೇ ಒಂದು ಪದವನ್ನು ಉಚ್ಚರಿಸುತ್ತಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಹೆಸರಿನಲ್ಲಿ ಅವಕಾಶ ವಂಚಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರ ಮೀಸಲಾತಿಯನ್ನು ಕಸಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. ಮೀಸಲಾತಿ ಕುರಿತ ಕೇಂದ್ರದ ನಿಲುವು ವಿರೋಧಿಸಿ ಪೆಬ್ರವರಿ 16ರಂದು ಇಂದಿರಾ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುವುದು ಎಂದು ಉತ್ತಮ್ ಕುಮಾರ್ ರೆಡ್ಡಿ ಪ್ರಕಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News