ಚಿಕ್ಕಮಗಳೂರು: ಮೀಸಲಾತಿ ಬಗ್ಗೆ ಸುಪ್ರೀಂ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2020-02-18 18:40 GMT

ಚಿಕ್ಕಮಗಳೂರು, ಫೆ.18: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನಸಾಮಾನ್ಯರ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಆರೋಪಿಸಿದ್ದಾರೆ.

ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ, ಎಸ್ಟಿ ವಿಭಾಗದ ನೇತೃತ್ವದಲ್ಲಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ರವರು ರಚಿಸಿದ ಸಂವಿಧಾನದ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಇದರ ವಿರುದ್ಧ ಜನತೆ ಧ್ವನಿ ಎತ್ತಬೇಕಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರ ಸಮಾನತೆ, ಸಮಬಾಳು ವಿಚಾರಗಳ ಬಗ್ಗೆ ಬಿಜೆಪಿಯವರಿಗೆ ಅಭಿಮಾನವಿಲ್ಲ. ಅವಕಾಶ ಸಿಕ್ಕಾಗೆಲ್ಲಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಈಗ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದಿರುವ ಅವರು ಮುಂದಿನ ದಿನಗಳಲ್ಲಿ ಮಕ್ಕಳ ವಿದ್ಯಾಭ್ಯಾಸದಲ್ಲೂ ಮೂಗು ತೂರಿಸುವ ಆತಂಕವಿದೆ ಎಂದರು.

ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಗೆ ನೀಡುವ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸುವ ಮೂಲಕ ಬಡ ವಿದ್ಯಾರ್ಥಿಗಳ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದರೆ ಮುಂದೊಂದು ದಿನ ಸರ್ಕಾರದ ವಿಫಲತೆಗಳನ್ನು ಪ್ರಶ್ನಿಸಬಹುದು ಎಂಬ ಆತಂಕದಿಂದ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಒಡೆದಾಳುವ ನೀತಿ ಅನುಸರಿಸುತ್ತಿದೆ. ಅಧಿಕಾರದ ಆಸೆಯಿಂದ ಅನೇಕ ಷಡ್ಯಂತ್ರಗಳನ್ನು ಮಾಡುತ್ತಿದ್ದು, ಜನರು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಡಾ.ಡಿ.ಎಲ್.ವಿಜಯಕುಮಾರ್, ಕಾಂಗ್ರೆಸ್ ಎಸ್ಸಿ-ಎಸ್ಟಿ ವಿಭಾಗದ ಅಧ್ಯಕ್ಷ ಹೂವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರಸಭಾ ಮಾಜಿ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಹಿರೇಮಗಳೂರು ರಾಮಚಂದ್ರ, ಪವನ್, ನೇತ್ರಾವತಿ, ರೂಬಿನ್‍ ಮೋಸೆಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News