ಪುತ್ತೂರು: ಫೆ. 21ರಿಂದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Update: 2020-02-19 09:24 GMT

ಮಂಗಳೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾನೂನು ಮಹಾವಿದ್ಯಾಲಯದಲ್ಲಿ ಎರಡನೇ ವರ್ಷದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಫೆ. 21, 22, 23ರಂದು ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ಫೆ. 21ರಂದು ಕಾರ್ಯಕ್ರಮವನ್ನು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ನಟರಾಜ ಆರ್. ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೃಷ್ಣಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ವಿವೇಕ್ ಸುಬ್ಬ ರೆಡ್ಡಿ ಮತ್ತು ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನಿರ್ದೇಶಕ ಡಾ.ಬಿ.ಕೆ. ರವೀಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫೆ. 23 ರಂದು ಸಮಾರೋಪ ಸಮಾರಂಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹ  ಸಮಾರೋಪ ಭಾಷಣ ಮಾಡಲಿದ್ದಾರೆ. ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಈಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಉಚ್ಚನ್ಯಾಯಾಲಯದ ನ್ಯಾಯಾಧೀಶ ಎಂವಿ ಇಂದ್ರೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಇದು ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಾಗಿರುವುದರಿಂದ ದೇಶದ ವಿವಿಧ ಪ್ರತಿಷ್ಠಿತ ಕಾನೂನು ಕಾಲೇಜುಗಳ ಮೂವತ್ತಕ್ಕೂ ಅಧಿಕ ತಂಡಗಳು ಭಾಗವಹಿಸಲಿವೆ. ಫೆ.21ರಂದು ಪ್ರಾಥಮಿಕ ಹಂತದ ಸ್ಪರ್ಧೆಯು ನಡೆಯಲಿದ್ದು, 22ರಂದು ಕ್ವಾರ್ಟರ್ಫೈನಲ್ ಹಾಗೂ 23ರಂದು ಸೆಮಿಫೈನಲ್ ಮತ್ತು ಫೈನಲ್ ಸ್ಪರ್ಧೆ ನಡೆಯಲಿದೆ ಎಂದು ಬಿಕೆ ರವೀಂದ್ರ ಮಾಹಿತಿ ನೀಡಿದರು.

ವಿವೇಕಾನಂದ ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಚಿ ಅರವಿಂದ ವಳಕಟ್ಟೆ, ಹಿರಿಯ ಕಾನೂನು ಸಲಹೆಗಾರ ಮನೀಶ್ ಕೆ ಸಾಲಿಯಾನ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News