ಪೊಲೀಸರ ಮೂಲಕ ಕೋಮುಗಲಭೆಗೆ ಬಿಜೆಪಿ ಯತ್ನ: ಪ್ರಕಾಶ್ ರಾಠೋಡ್

Update: 2020-02-19 14:42 GMT

ಬೆಂಗಳೂರು, ಫೆ.19: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರ ಪೊಲೀಸರ ಮೂಲಕ ರಾಜ್ಯ ಹಾಗೂ ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ಷಡ್ಯಂತ್ರಗಳನ್ನು ರೂಪಿಸುತ್ತಿದೆ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಆರೋಪಿಸಿದ್ದಾರೆ.

ಬುಧವಾರ ವಿಧಾನಪರಿಷತ್‌ನಲ್ಲಿ ನಿಯನ 68ರಡಿ ವಿಷಯ ಪ್ರಸ್ತಾಪಿಸಿದ ಅವರು, ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಅನ್ನು ವಿರೋಧಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸುತ್ತಿರುವ ಹಲ್ಲೆಗಳು ಹಾಗೂ ಸರಕಾರದ ಮೌನ ನೋಡಿದರೆ ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವ ಯತ್ನ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವದ ಕಗ್ಗೊಲೆ: ಸರಕಾರದ ವಿರುದ್ಧ ಪ್ರತಿಭಟನೆ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದೆ. ಆದರೆ, ಬಿಜೆಪಿ ಸರಕಾರ ಸಿಎಎ, ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸುವಂತಹ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಅವರು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಕರ್ತ ಸಿರಾಜ್ ಬಿಸರಳ್ಳಿ ಕವನ ವಾಚಿಸಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಶಾಲೆಯಲ್ಲಿ ನಾಟಕ ಮಾಡಿದ್ದಕ್ಕೆ ವಿದ್ಯಾರ್ಥಿಗಳನ್ನು ತನಿಖೆಗೆ ಒಳಪಡಿಸಲಾಗಿದೆ. ಆ ಮೂಲಕ ಪೊಲೀಸರು ಅಸಂವಿಧಾನಿಕವಾಗಿ ನಡೆದು ಕೊಂಡಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಅವರು ಒತ್ತಾಯಿಸಿದರು.

ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರತ್ತ ಕಲ್ಲು ತೂರಿ ಪ್ರಚೋದನೆ ಮಾಡುತ್ತಿರುವ ಪೋಸ್ಟರ್ ಅನ್ನು ಸದನದಲ್ಲಿ ಪ್ರದರ್ಶಿಸಿ, ಸಭಾಧ್ಯಕ್ಷರಿಗೆ ನೀಡುತ್ತಿದ್ದೇನೆ. ಈ ಬಗ್ಗೆ ಸದನ ಸಮಿತಿ ರಚಿಸಿ ತನಿಖೆ ನಡೆಸಲಿ. ನಾನು ಸದನದಲ್ಲಿ ಪ್ರದರ್ಶಿಸಿರುವ ಪೋಸ್ಪರ್ ತಪ್ಪಾಗಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ.

-ಪ್ರಕಾಶ್ ರಾಠೋಡ್, ಕಾಂಗ್ರೆಸ್ ಸದಸ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News