ಫೆ.28ರಿಂದ ಸರಕಾರಿ ನೌಕರರ ರಾಜ್ಯ ಕ್ರೀಡಾಕೂಟ: ಲಾಂಛನ ಬಿಡುಗಡೆ

Update: 2020-02-21 17:17 GMT

ಧಾರವಾಡ, ಫೆ.21: ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ಆಶ್ರಯದಲ್ಲಿ ಫೆ.28, 29 ಮತ್ತು ಮಾ.1ರಂದು ಜರುಗಲಿರುವ ರಾಜ್ಯ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಸಿದ್ಧತೆ ಭರದಿಂದ ಸಾಗಿದ್ದು, ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳು ವಿವಿಧ ಸಮಿತಿಗಳ ಮೂಲಕ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕ್ರೀಡಾಕೂಟ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿವಿಧ ಸಮಿತಿಗಳ ಸಭೆ ಹಾಗೂ ಕ್ರೀಡಾಕೂಟ-2020 ಲಾಂಛನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಸತಿ, ಸಾರಿಗೆ, ನಿರ್ಣಾಯಕರು, ವೇದಿಕೆ, ನೋಂದಣಿ, ಆಹಾರ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಸಮಿತಿಗಳನ್ನು ಸಂಘದ ಪ್ರತಿನಿಧಿಗಳ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿದೆ. ಕಳೆದ ಒಂದು ತಿಂಗಳಿಂದ ವಿವಿಧ ಸಮಿತಿ ಸದಸ್ಯರು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಹೊರ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ವ್ಯವಸ್ಥೆ ಊಟ, ವಸತಿ, ಸಾರಿಗೆ ಹಾಗೂ ಆಟದ ಮೈದಾನಗಳ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಪೂರ್ಣಗೊಂಡಿವೆ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಾಳುಗಳ ವಿವರಗಳನ್ನು ಕೇಂದ್ರ ಕಚೇರಿಗೆ ಸಲ್ಲಿಸಿದ್ದಾರೆ. ರಾಜ್ಯ ಕ್ರೀಡಾಕೂಟದಲ್ಲಿ ಸುಮಾರು 48 ಕ್ರೀಡೆ ಮತ್ತು 28 ಸಾಂಸ್ಕೃತಿಕ ಸ್ಪರ್ಧೆಗಳನ್ನು ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಆಯೋಜಿಸಲಾಗುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಕ್ರೀಡಾಕೂಟ ಆಯೋಜನೆ ಆತಿಥ್ಯ ಧಾರವಾಡ ಜಿಲ್ಲೆಗೆ ನೀಡಲಾಗಿದ್ದು, ಇಲ್ಲಿನ ಜಿಲ್ಲಾಡಳಿತ ಹಾಗೂ ಜಿಲ್ಲಾ ಘಟಕ ಪದಾಧಿಕಾರಿಗಳು ಅತ್ಯಂತ ತೃಪ್ತಿಕರವಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಫೆ.28ರ ಬೆಳಗ್ಗೆ 9.30 ರಿಂದ ಸ್ಪರ್ಧಾಳುಗಳ ನೊಂದಣಿ ಆರಂಭವಾಗುತ್ತದೆ. ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ, ಸ್ಮರಣ ಸಂಚಿಕೆ ಬಿಡುಗಡೆ ಮಾಡುತ್ತಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News