ಪರೀಕ್ಷೆಯಲ್ಲಿ ಅಕ್ರಮ ಎಸಗಿದರೆ ಐದು ವರ್ಷ ಜೈಲು, ಐದು ಲಕ್ಷ ರೂ. ದಂಡ

Update: 2020-02-23 16:32 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.23: 2020ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದಲ್ಲಿ ಐದು ವರ್ಷಗಳ ಕಾಲ ಸೆರೆವಾಸ ಅಥವಾ ಐದು ಲಕ್ಷ ರೂ.ದಂಡ ಅಥವಾ ಎರಡನ್ನೂ ವಿಧಿಸಲಾಗುವುದು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸೂಚನೆ ನೀಡಿದೆ.

ಪರೀಕ್ಷಾರ್ಥಿಗಳು ನಕಲು ಮಾಡುವುದು, ನಕಲು ಮಾಡಲು ಸಹಾಯ ಮಾಡುವುದು, ಬದಲಿ ವ್ಯಕ್ತಿಯಾಗಿ ಪರೀಕ್ಷೆ ಬರೆಯುವುದು, ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ಮೊಬೈಲ್ ಉಪಯೋಗಿಸುವುದು ಅಥವಾ ಬಳಸಿದರೆ ಐದು ವರ್ಷಗಳ ಕಾಲ ಸೆರೆವಾಸ ಅಥವಾ ಐದು ಲಕ್ಷ ರೂ.ದಂಡ ಅಥವಾ ಎರಡನ್ನೂ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಇದಲ್ಲದೇ, ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಿದೆ, ಪರೀಕ್ಷಾ ಕೇಂದ್ರಕ್ಕೆ ಇಲಾಖೆಯ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ, ಪರೀಕ್ಷಾ ಕೇಂದ್ರದ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು.

ಪರೀಕ್ಷಾ ಕಾರ್ಯಗಳಿಗೆ ಅಡ್ಡಿ ಉಂಟು ಮಾಡಿದರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ನಿಷೇಧಿತ ಪ್ರದೇಶ, ಇ-ಕ್ಯಾಮರಾ, ಲ್ಯಾಪ್‌ಟಾಪ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಿದೆ.

ಯಾವುದೇ ರೀತಿಯ ವಿದ್ಯುನ್ಮಾನ ಉಪಕರಣಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುವುದು ಹಾಗೂ ಪರೀಕ್ಷಾ ಅಕ್ರಮಗಳ ತಡೆಗೆ ಕರ್ನಾಟಕ ರಾಜ್ಯ ಶಿಕ್ಷಣ ಕಾಯ್ದೆ-1983 ತಿದ್ದುಪಡಿ ಕಾಯ್ದೆ 2017 ಅನ್ನು ಜಾರಿಗೆ ತರಲಾಗಿದೆ. ಕೊಠಡಿ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಅಕ್ರಮ ಎಸಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕ್ರಮ ವಹಿಸಬೇಕು. ಮುಳ್ಳು ಹೊಂದಿರುವ ಸಾಮಾನ್ಯ ಕೈಗಡಿಯಾರವನ್ನು ಧರಿಸಲು ಅನುಮತಿ ನೀಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News