ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಪ್ರಶ್ನಿಸಿ ಪಿಐಎಲ್: ನಿಯಮಗಳನ್ನು ರೂಪಿಸದಿರುವ ಬಗ್ಗೆ ವಿವರ ಸಲ್ಲಿಸಿ- ಹೈಕೋರ್ಟ್

Update: 2020-02-24 18:25 GMT

ಬೆಂಗಳೂರು, ಫೆ.24: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ಎಂ. ಸುಧೀಂದ್ರರಾವ್ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಹಿಂದಿನ ಆದೇಶದಂತೆ ನಿಯಮಗಳನ್ನು ರೂಪಿಸದಿರುವ ಬಗ್ಗೆ ಮಾ.6ರೊಳಗೆ ವಿವರಣೆ ಸಲ್ಲಿಸಲು ಸೂಚಿಸಿದೆ.

ಈ ಕುರಿತು ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಮಾಲಿನ್ಯ ನಿಯಂತ್ರಣ ಮಂಡಳಿಗೆ ಎಂ. ಸುಧೀಂದ್ರರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ 2019ರ ಡಿ.30ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು. ಅಧ್ಯಕ್ಷ ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸದಂತೆ ಸುಧೀಂದ್ರರಾವ್ ಅವರಿಗೆ ನಿರ್ಬಂಧಿಸಬೇಕು. ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಗೆ ನಿಯಮಗಳನ್ನು ರೂಪಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ .

ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಆರು ತಿಂಗಳಲ್ಲಿ ನಿಯಮಗಳನ್ನು ರೂಪಿಸಬೇಕು ಎಂದು 2017ರ ಸೆ.22ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮಧ್ಯೆ 2019ರ ಮಾ.5ರಂದು ಜಯರಾಂ ಅವರನ್ನು ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅವರು ರಾಜೀನಾಮೆ ಕೊಟ್ಟಿದ್ದರಿಂದ ಅದೇ ವರ್ಷ ಜೂ.20ರಂದು ಶಾಸಕ ಡಾ. ಕೆ. ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಅವರೂ ಸಹ ರಾಜೀನಾಮೆ ಸಲ್ಲಿಸಿದರು.

ಈ ಇಬ್ಬರ ನೇಮಕಾತಿ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ನಿಯಮಗಳನ್ನು ರೂಪಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿ 2019ರ ಸೆ.23ರಂದು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತ್ತು. ಈ ಸಂಬಂಧ ಅರ್ಜಿದಾರರು ಅ.17ರಂದು ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಅದನ್ನು ಪರಿಗಣಿಸಲಾಗಿಲ್ಲ. ಈ ಮಧ್ಯೆ ಎಂ. ಸುಧೀಂದ್ರರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News