ಶಾಸಕ ಯತ್ನಾಳ್ ಹೇಳಿಕೆಗೆ ಖಂಡನೆ: ಫೆ.27ರಂದು ಪ್ರಗತಿಪರ ಸಂಘಟನೆಗಳಿಂದ ರಾಜ್ಯಾದ್ಯಂತ ಪ್ರತಿಭಟನೆ

Update: 2020-02-26 17:00 GMT

ಬೆಂಗಳೂರು, ಫೆ.26: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಪಾಕಿಸ್ತಾನ ಏಜೆಂಟ್ ಎಂದು ಕರೆದಿರುವ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಶಾಸಕರು, ಮಾಜಿ ಶಾಸಕರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪ್ರಗತಿಪರರು ಖಂಡಿಸಿದ್ದು, ಬಿಜೆಪಿಯಿಂದ ಯತ್ನಾಳ್ ಅವರನ್ನು ಉಚ್ಛಾಟಿಸುವಂತೆ ಆಗ್ರಹಿಸಿದ್ದಾರೆ.

ಬುಧವಾರ ಪ್ರಸ್‌ಕ್ಲಬ್ ನ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಹೆಚ್.ಎಸ್.ದೊರೆಸ್ವಾಮಿ ಅವರನ್ನು ನಕಲಿ ಹೋರಾಟಗಾರರೆಂದು ಕರೆದಿರುವ ಯತ್ನಾಳ್ ಅವರ ಹೇಳಿಕೆ, ಅವರ ಮಾನಸಿಕ ಸ್ಥಿತಿಯನ್ನು ಸೂಚಿಸುತ್ತದೆಯೇ ಹೊರತು ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಘನತೆಯನ್ನು ಸಾಸುವೆ ಕಾಳಿನಷ್ಟು ಕಡಿಮೆ ಮಾಡುವುದಿಲ್ಲ. ಈ ಕುರಿತು ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಬಿಜೆಪಿಯಿಂದ ಯತ್ನಾಳ್ ಅವರನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಬಸನಗೌಡ ಪಾಟೀಲ್ ಅವರ ಹೇಳಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ರಾಜ್ಯ ರೈತ ಸಂಘಟನೆ, ದಲಿತ ಸಂಘಟನೆ ಹಾಗೂ ವಿವಿಧ ಸಂಘಟನೆಗಳಿಂದ ಫೆ.27ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಬಿಜೆಪಿಯಿಂದ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡನೀಯ. ದೊರೆಸ್ವಾಮಿ ಅವರ ಬಗ್ಗೆ ಮಾತನಾಡುವುದಕ್ಕೆ ಯತ್ನಾಳ್ ಅವರಿಗೆ ಅನುಮತಿ ನೀಡಿದವರು ಯಾರು? ದೊರೆಸ್ವಾಮಿ ಅವರಿಗೆ ಮುದುಕ ಎಲ್ಲಿದ್ದಾನೆ ಎಂದು ಕರೆದಿರುವುದು ಯತ್ನಾಳ್ ಅವರ ಸಣ್ಣತನ ತೋರಿಸುತ್ತದೆ. ನಿಜವಾಗಿಯೂ ದೊರೆಸ್ಬಾಮಿ ಅವರ ಬಗ್ಗೆ ಮಾತನಾಡುವವರು ನಾಲಿಗೆ ತೊಳೆದುಕೊಂಡು ಮಾತನಾಡಬೇಕು ಎಂದರು.

ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಖಂಡಿಸಿ, ಫೆ.27ರಂದು ಬೆಳಗ್ಗೆ 10ಕ್ಕೆ ನಗರದ ಗಾಂಧಿ ಭವನದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿ.ಸಿ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳಿ

ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕಬೇಕು ಎಂದು ಹೇಳಿಕೆ ನೀಡಿರುವ ಸಚಿವ ಬಿ.ಸಿ ಪಾಟೀಲ್ ಅವರ ವಿರುದ್ಧವೂ ಬಿಜೆಪಿ ಕ್ರಮ ಕೈಗೊಳ್ಳಬೇಕು. ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕವಾಗಿ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ.

-ಬಿ.ಆರ್ ಪಾಟೀಲ್, ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News