ಮಂಗಳೂರು ಹಿಂಸಾಚಾರ ಪ್ರಕರಣ: 16 ಮಂದಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು

Update: 2020-02-27 15:49 GMT

ಬೆಂಗಳೂರು, ಫೆ.27: ಕಳೆದ ಡಿಸೆಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ 16 ಮಂದಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 

ಜಾಮೀನು ಕೋರಿ ಸುಹೈಲ್, ತಂಝೀಲ್ ಸೇರಿ ಒಟ್ಟು 16 ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠವು 16 ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತು. ಮಂಗಳೂರಿನ ನ್ಯಾಯಾಲಯ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿತ್ತು.

ಮಂಗಳೂರು ಉತ್ತರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಹಾಗೂ ಠಾಣೆಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 16 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿ, ಬಂಧನಕ್ಕೊಳಗಾಗಿದ್ದರು. ಇದೇ ಪ್ರಕರಣದಲ್ಲಿ ಈ ಮೊದಲು 21 ಮಂದಿಗೆ ನ್ಯಾ.ಕುನ್ನಾ ಅವರು ಜಾಮೀನು ಮಂಜೂರು ಮಾಡಿದ್ದರು.

ಪ್ರಕರಣವೇನು: ಕಳೆದ 2019ರ ಡಿ.19ರಂದು ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆದಿತ್ತು. ಸುಮಾರು 1500 ರಿಂದ 2000 ಮಂದಿ ಮುಸ್ಲಿಂ ಯುವಕರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ಕಲ್ಲು, ಬಾಟೆಲ್ ತೂರಾಟ ಮಾಡಿದ್ದರೆಂದು ಪೊಲೀಸರು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಮಂಗಳೂರು ಉತ್ತರ ಠಾಣೆ ಪೊಲೀಸರು ಸೆಕ್ಷನ್ 143 ಸೇರಿ ಹಲವು ಪ್ರಕರಣಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News