ನಂಜನಗೂಡಿನಲ್ಲಿ ಫೆ.29ರಿಂದ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Update: 2020-02-27 16:55 GMT

ಮೈಸೂರು, ಫೆ.27: ಫೆ. 29 ರಿಂದ ಮಾರ್ಚ್ 1 ರವರೆಗೆ 17ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ನಂಜನಗೂಡಿನಲ್ಲಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ವೈ ಡಿ ರಾಜಣ್ಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಜನಗೂಡಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಶ್ರೀಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿರುವ ಕಲಾಮಂದಿರದ ಶ್ರೀಕಂಠಶಾಸ್ತ್ರಿ ಮಾಹಾಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದು, ಹಿರಿಯ ಜಾನಪದ ವಿದ್ವಾಂಸ ಟಿ.ಎಸ್.ರಾಜಪ್ಪ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಹಿರಿಯ ಲೇಖಕಿ, ಕುವೆಂಪು ಪುತ್ರಿ ತಾರಿಣಿ ಚಿದಾನಂದಗೌಡರಿಂದ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಸಂಸದರಾದ ವಿ. ಶ್ರೀನಿವಾಸದ ಪ್ರಸಾದ್, ಪ್ರತಾಪ್ ಸಿಂಹ ಸೇರಿದಂತೆ ಶಾಸಕರು, ಜನಪ್ರತಿನಿಧಿಗಳು ಸಾಹಿತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಚಲಿತ ವಿದ್ಯಮಾನಗಳ ಕುರಿತು ಜಾನಪದ, ಸಂಗೀತ, ಕವಿಗೋಷ್ಠಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು.

ಫೆ.29 ರಂದು ಬೆಳಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷರನ್ನು ಭವ್ಯ ಮೆರವಣಿಗೆಯೊಂದಿಗೆ ವೇದಿಕೆಗೆ ಕರೆತರಲಾಗುವುದು. ಎರಡು ದಿನ ಅದ್ಧೂರಿಯಾಗಿ ಸಮ್ಮೇಳನ ಜರುಗಲಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕನ್ನಡ ನುಡಿಜಾತ್ರೆಗೆ ಎಲ್ಲಾ ಸಾಹಿತ್ಯ ಅಭಿಮಾನಿಗಳು, ಕನ್ನಡ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News