ಯತ್ನಾಳ್ ಕ್ಷಮೆ ಕೋರದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

Update: 2020-02-28 12:17 GMT

ಬೆಂಗಳೂರು, ಫೆ.28: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಕೋಮು ಘರ್ಷಣೆಗೆ ಬಿಜೆಪಿ ನಾಯಕರ ಪ್ರಚೋದನೆಯೆ ಕಾರಣ. ಈಗಾಗಲೆ 33 ಜನ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿರಾರು ಜನ ಮನೆ, ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಮುಘರ್ಷಣೆಯನ್ನು ತಡೆಯುವಲ್ಲಿ ಕೇಂದ್ರದ ಬಿಜೆಪಿ ಸರಕಾರ ವಿಫಲವಾಗಿದೆ. ಮತಗಳ ಧ್ರುವೀಕರಣಕ್ಕಾಗಿ ಬಿಜೆಪಿ ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಕಿಡಿಗಾರಿದರು.

ದಿಲ್ಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ. ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಈ ಘರ್ಷಣೆಗೆ ಕಾರಣಕರ್ತರಾಗಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ್ ಖಂಡ್ರೆ ಆಗ್ರಹಿಸಿದರು.

ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿರುವ ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಿದ ನ್ಯಾಯಾಧೀಶರನ್ನೆ ರಾತ್ರೊರಾತ್ರಿ ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶರಿಗೆ ಇವತ್ತು ಕೇಂದ್ರ ಸರಕಾರದ ಭಯ ಕಾಡುವಂತಾಗಿದೆ. ಈ ಹಿಂದೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು ಎಂದು ಅವರು ಹೇಳಿದರು.

ದಿಲ್ಲಿಯ ಕೋಮುಘರ್ಷಣೆಯಲ್ಲಿ ಸಂಭವಿಸಿದ ಸಾವು ನೋವುಗಳ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ರಾಷ್ಟ್ರಪತಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಅಮಿತ್ ಶಾರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಈಶ್ವರ್ ಖಂಡ್ರೆ ಒತ್ತಾಯಿಸಿದರು.

ನಮ್ಮ ರಾಜ್ಯದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಯತ್ನಾಳ್ ಕ್ಷಮೆ ಕೋರದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಅವರು ಹೇಳಿದರು.

ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಸರಕಾರಿ ನೌಕರರ ವೇತನ ಇನ್ನೂ ಆಗಿಲ್ಲ. ಪಿಎಫ್ ಮರು ಪಾವತಿಯನ್ನೂ ಮಾಡಿಲ್ಲ. ಈ ಹಿಂದೆ ಯಾವತ್ತೂ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗಿರಲಿಲ್ಲ. ರಾಜ್ಯದಲ್ಲಿ ಕಂಡು ಕೇಳರಿಯದ ಪ್ರವಾಹ ಬಂದಿತ್ತು. ಸಂತ್ರಸ್ತರ ಪುನರ್‌ವಸತಿ ಕಾರ್ಯ ಇನ್ನೂ ಆಗಿಲ್ಲ ಎಂದು ಈಶ್ವರ್ ಖಂಡ್ರೆ ದೂರಿದರು.

ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರವನ್ನು ಶೇ.12ರಷ್ಟು ಏರಿಕೆ ಮಾಡಲಾಗಿದೆ. ಹಾಲಿನ ದರವನ್ನು ಹೆಚ್ಚಳ ಮಾಡಲಾಗಿದೆ. ವೈದ್ಯಕೀಯ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಅಡುಗೆ ಅನಿಲ್ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ. ಬಿಜೆಪಿ ಸರಕಾರ ರೈತ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತೊಗರಿ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿ 20 ದಿನಗಳಾದರೂ ಇನ್ನೂ ಖರೀದಿ ಪ್ರಕ್ರಿಯೆ ಆರಂಭವಾಗಿಲ್ಲ. ಬಡವರಿಗೆ ವಿತರಿಸಲಾಗುತ್ತಿರುವ ಪಡಿತರ ಅಕ್ಕಿ ಕಡಿತ ಮಾಡುವ ಮಾಹಿತಿ ಸಿಕ್ಕಿದೆ. ಈಗ ನೀಡುತ್ತಿರುವ ತಲಾ 7 ಕೆಜಿ ಅಕ್ಕಿಯ ಪ್ರಮಾಣವನ್ನು ಮುಂದುವರಿಸಬೇಕು ಎಂದು ಈಶ್ವರ್ ಖಂಡ್ರೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News