ಮಹಾದಾಯಿ ಯೋಜನೆಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಬಿಎಸ್‌ವೈ

Update: 2020-02-28 12:23 GMT

ಬೆಂಗಳೂರು, ಫೆ.28: ಕೇಂದ್ರ ಸರಕಾರವು ಮಹಾದಾಯಿ ಕುರಿತು ಅಧಿಸೂಚನೆ ಪ್ರಕಟಿಸಿದ್ದು, ಮಾ.5ರಂದು ಮಂಡಿಸಲಾಗುವ ರಾಜ್ಯದ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸಿ, ಆದಷ್ಟು ಶೀಘ್ರದಲ್ಲಿ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ನಗರದಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾದಾಯಿ ಅಧಿಸೂಚನೆ ಪ್ರಕಟಿಸಿದ್ದಕ್ಕೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಹಲವು ವರ್ಷಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಈ ಯೋಜನೆಯ ಅನುಷ್ಠಾನದಿಂದಾಗಿ ನಮ್ಮ ರಾಜ್ಯಕ್ಕೆ 13.5 ಟಿಎಂಸಿ ನೀರು ಲಭ್ಯವಾಗುತ್ತದೆ. ಇದರಿಂದ ಉತ್ತರ ಕರ್ನಾಟಕ ಭಾಗದ ಜನತೆಗೆ ಕುಡಿಯುವ ನೀರು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಅಕ್ರಮವಾಗಿ ನೀರು ಹರಿಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸತ್ಯಕ್ಕೆ ದೂರವಾದ ಮಾತು. ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News